ಮೈಸೂರು: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಹಿಂಪಡೆಯುವAತೆ ಈಗಿನ ಕಾಂಗ್ರೆಸ್ ಸರ್ಕಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಜೂನ್ 15 ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಬಿಜೆಪಿ ಸರ್ಕಾರವು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಕಾಯ್ದೆ 2020, ಜಾನುವಾರು ಸಂರಕ್ಷಣೆ ಕಾಯ್ದೆ 2020 ಅನ್ನು ಜಾರಿಗೆ ತಂದಿದೆ. ಇವುಗಳನ್ನು ಕೂಡಲೇ ಸಿದ್ದರಾಮಯ್ಯನವರ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಜೂನ್ 15 ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತರ ಧರಣಿ ನಡೆಯಲಿದ್ದು, ಸರ್ಕಾರ ರೈತರ ಪರವಾದ ನೀತಿ ಮತ್ತು ಕಾರ್ಯಕ್ರಮಗಳನ್ನು ನೀಡಬೇಕೆಂದರು.
ಕಾರ್ಪೊರೇಟ್‌ಗಳಿಗೆ ಸಹಾಯ ಮಾಡಲು ಬಿಜೆಪಿ ಸರ್ಕಾರವು ಮೂರು ಕೃಷಿ ಸಂಬAಧಿತ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಅಧಿಕಾರಕ್ಕೆ ಬಂದ ನಂತರ ಈ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಈಗ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

