ಬೆಂಗಳೂರು (ಜೂ.20) ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಅನ್ನಭಾಗ್ಯ’ಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡದೇ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ (ಇಂದು )ಜೂ.20ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದೆ.
ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರೆಂಟಿಗಳ ಪೈಕಿ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೂ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವ ‘ಅನ್ನಭಾಗ್ಯ’ಕ್ಕೆ ಕೇಂದ್ರ ಆಹಾರ ನಿಗಮವು ಮೊದಲು ಅಕ್ಕಿ ನೀಡುವುದಾಗಿ ಹೇಳಿತ್ತು. ಆದರೆ ರಾಜಕೀಯ ಒತ್ತಡದಿಂದಾಗಿ ಬಳಿಕ ಅಕ್ಕಿ ನೀಡುವುದಿಲ್ಲ ಎಂದು ಯೂಟರ್ನ್ ಹೊಡೆದಿದ್ದು ಇದರಲ್ಲಿ ಬಿಜೆಪಿಯ ಕೈವಾಡವಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.
ಇನ್ನೊಂದೆಡೆ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮತ್ತು ಗ್ಯಾರಂಟಿ ಯೋಜನೆಯಡಿ ಬಡವರಿಗೆ ಹತ್ತು ಕೆ.ಜಿ. ಅಕ್ಕಿ ವಿತರಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಂಡಿದೆ. ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಒಟ್ಟು ಮೂರು ಹಂತದಲ್ಲಿ ಹೋರಾಟಕ್ಕೆ ಮುಂದಾಗಿದೆ. ಈ ಪೈಕಿ ಮೊದಲ ಹಂತವಾಗಿ ಬಿಜೆಪಿ ವತಿಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಹತ್ತು ಸಂಘಟನಾತ್ಮಕ ವಿಭಾಗ ಕೇಂದ್ರಗಳಲ್ಲಿ ಹೋರಾಟ ನಡೆಯಲಿದೆ.