ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಶತಾಯಗತಾಯ ಜಾರಿಗೊಳಿಸುವ ಚಿಂತೆಯ ನಡುವೆ ಇದೀಗ ಪ್ರತಿಭಟನೆಯ ತಲೆನೋವು ಶುರುವಾಗಿದೆ. ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ವೇತನ ಹೆಚ್ಚಳ, ಸೇವಾ ಭದ್ರತೆ, ವಿಮೆ ಸೌಲಭ್ಯ, ಪಿಂಚಣೆ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಾಳೆ ಜೂನ್ 27ರಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಜಮಾಯಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವೇತನ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದ ಹಿನ್ನಲೆಯಲ್ಲಿ ಇದೀಗ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಲಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕೆಲ ಭರವಸೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಈಡೇರಿಸುವುದಾಗಿ ನೀಡಿತ್ತು. ಆ ಬೇಡಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ವೇತನ ನೀಡಲಾಗುತ್ತದೆ. ಸಹಾಯಕಿಯರಿಗೆ ರೂ.10,000 ನೀಡುವುದಾಗಿ ಭರವಸೆ ನೀಡಿದ್ದ ಹಿನ್ನಲೆಯಲ್ಲಿ ನಾಳೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ