Share this news

ಬೆಂಗಳೂರು: 76ನೇ ಸ್ವಾತಂತ್ರ‍್ಯ ದಿನಾಚರಣೆ ನಿಮಿತ್ತ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯದ ಜನತೆಗೆ ಸ್ವಾತಂತ್ರ‍್ಯೋತ್ಸವ ಶುಭಾಶಯಗಳು. ಅನೇಕ ಮಹನೀಯರು ದೇಶದ ಸ್ವಾತಂತ್ರ‍್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ಸಾವಿರಾರು ಜನರ ತ್ಯಾಗ ಬಲಿದಾನಗಳ ಫಲವಾಗಿ ನಾವು ಇಂದು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲಾ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದರು. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲಾ ಮಹನೀಯರು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು ಅವರ ತ್ಯಾಗ ಬಲಿದಾನಗಳನ್ನು ದೇಶವು ಸ್ಮರಿಸಲೇಬೇಕು ಎಂದರು.

ರಸ್ತೆ, ಬಂದರು, ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಅಂತರಾಜ್ಯ ರಸ್ತೆಗಳನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.ಕೃಷಿ, ತೋಟಗಾರಿಕೆ ಉತ್ತೇಜನಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುವುದು. ಕೌಶಲ್ಯಾಭಿವೃದ್ಧಿ ಯೋಜನೆ ಮೂಲಕ ಯುವಕರಿಗೆ ತರಬೇತಿ ನೀಡಲಾಗುವುದು. ಕೈಗಾರಿಕೆ ಕ್ಷೇತ್ರದಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗುತ್ತೆ. ಮೈಸೂರು, ಮಂಗಳೂರು, ಧಾರವಾಡ-ಹುಬ್ಬಳ್ಳಿ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಗಳ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೈಗಾರಿಕಾ ವಲಯಗಳ ನಡುವೆ ಸಂಪರ್ಕಿಸಲು ರಸ್ತೆ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಭಾರತ ಇಂದು ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಕಂಡಿದೆ. ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿಗಳು ಜಾರಿ ಮಾಡಿದ್ದೇವೆ. ಆ.27ರಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ಸಾವಿರ ಹಣ ಹಾಕುತ್ತೇವೆ ಎಂದರು. ಸರ್ಕಾರಿ ಮಕ್ಕಳಿಗೆ ವಾರಕ್ಕೆ ಎರಡು ಬಾರಿ ಮೊಟ್ಟೆ ಕೊಡಲು ನೀರ್ಧರಿಸಿದ್ದೇವೆ. ಬಡ ಡಯಾಲಿಸಿಸ್ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ನಗರ ಪ್ರದೇಶದ ಬಡವರು, ಶ್ರಮಿಕರಿಗಾಗಿ ಇಂದಿರಾ ಕ್ಯಾಂಟಿನ್ ತೆರೆಯಲಾಗಿದೆ. ಇದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಕರ್ನಾಟಕದಲ್ಲಿ ವಸತಿ ಯೋಜನೆಗಳಡಿ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಗ್ರಾಮೀಣ ಭಾಗದಲ್ಲಿ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ನೀಡಲಾಗುವುದು ಎಂದು ಹೇಳಿದರು.

ಬ್ರಿಟಿಷ್ ಭಾರತದಲ್ಲಿ ನಮ್ಮ ದೇಶದ ಸಂಪತ್ತನ್ನು ಬ್ರಿಟಿಷರು ಹೊತ್ತೂಯ್ದರು. ಆದರೆ ಇಂದು ನಮ್ಮಲ್ಲಿ ಕೆಲವೇ ದೊಡ್ಡ ಬಂಡವಾಳಿಗರ ಬಳಿ ಸಂಪತ್ತು ಶೇಖರಣೆಗೊಳ್ಳುತ್ತಿದೆ. ಈ ರೀತಿಯಾದರೆ, ಅಭಿವೃದ್ಧಿ ಸಾಧ್ಯವೆ? ಕುವೆಂಪು ಅವರು ತಮ್ಮದೊಂದು ಪದ್ಯದಲ್ಲಿ ಕವಿ ಕುವೆಂಪು ಅವರು ಕತ್ತಿ ಪರದೇಶಿಯಾದರೆ ಮಾತ್ರ ನೋವೆ? ನಮ್ಮವರೆ ಹದಹಾಕಿ ತಿವಿದರದು ಹೂದೆ?” ಎಂದು ಪ್ರಶ್ನಿಸಿದ್ದಾರೆ. ಇದನ್ನೆಲ್ಲ ಮನಗಂಡೆ. ನಾವು ಸಂಪತ್ತಿನ ಸಂಗ್ರಹ ಮತ್ತು ಹಂಚಿಕ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ. ಅದಕ್ಕಾಗಿಯೇ ನಾವು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ 5 ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅರ್ಥಶಾಸ್ತ್ರಜ್ಞ ಅಮರ್ತ್ಯಸೇನ್ ಅವರ ಪ್ರಮೇಯವಾದ ಅಭಿವೃದ್ಧಿಯ ಸ್ವಾತಂತ್ರ‍್ಯ ಎಂಬುದರಲ್ಲಿ ನಂಬಿಕೆಯಿಟ್ಟು ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆ ಎಂದರು.

Leave a Reply

Your email address will not be published. Required fields are marked *