ಮೈಸೂರು: ರಾಜ್ಯ ಸರ್ಕಾರದ ಐದು ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಚಾಲನೆ ನೀಡಲಾಗುತಿದ್ದು, ರಾಜ್ಯದ 1.10 ಕೋಟಿ ಕುಟುಂಬಗಳ ಯಜಮಾನಿಯರ ಖಾತೆಗಳಿಗೆ ತಲಾ .2 ಸಾವಿರ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಮಾಹಿತಿ ನೀಡಿದ ಅವರು, ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಪುಟದ ಸದಸ್ಯರು ಭಾಗವಹಿಸುತ್ತಿದ್ದು, ಇದೊಂದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ ಎಂದರು. ಅಂದು ಸುಮಾರು 1.5 ಲಕ್ಷ ಮಹಿಳೆಯರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಭಾಗಿಯಾಗುವುದರೊಂದಿಗೆ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಅಲ್ಲದೆ, ಗೃಹಲಕ್ಷ್ಮಿ ಯೋಜನೆಗೆ ಶೇ.80 ರಷ್ಟುನೋಂದಣಿ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ನೋಂದಣಿ ಪ್ರಕ್ರಿಯೆಯು ನಿರಂತರವಾಗಿರುತ್ತದೆ ಎಂದು ಹೇಳಿದರು.

