ಬೆಂಗಳೂರು:ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ಈ ಕುರಿತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.
ರಾಜ್ಯದಾದ್ಯಂತ ಮಳೆ ಕೊರತೆಯಿಂದ ಬರಗಾಲ ಆವರಿಸಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನಾಡಿನ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಬೇಕಿದ್ದ ಸರ್ಕಾರ ನಿದ್ರೆಯಲ್ಲಿದೆ ಎಂದು ಆರೋಪಿಸಿದ್ದಾರೆ.ಪ್ರಸ್ತುತ 198ಕ್ಕಿಂತಲೂ ಹೆಚ್ಚು ತಾಲೂಕುಗಳಲ್ಲಿ ಬರದ ಪರಿಸ್ಥಿತಿಯಿದೆ, ಆದರೂ ಸರ್ಕಾರ ಬರಪೀಡಿತ ತಾಲೂಕುಗಳೆಂದು ಇನ್ನೂ ಘೋಷಿಸಿಲ್ಲ ಹಾಗೂ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರವಿಕುಮಾರ್ ಕಿಡಿಕಾರಿದ್ದಾರೆ.
ಇದಲ್ಲದೇ ಈ ಬಾರಿಯ ಭೀಕರ ಬರಗಾಲದಿಂದಾಗಿ ದನಕರುಗಳಿಗೆ ಮೇವು ಹಾಗೂ ಕುಡಿಯಲು ನೀರಿಲ್ಲದ ಸ್ಥಿತಿ ಎದುರಾಗಿದೆ ವಿದ್ಯುತ್ ಬಿಲ್ ದುಬಾರಿಯಾಗಿದ್ದರಿಂದ ಮಧ್ಯಮ ವರ್ಗದವರು ಪರಿತಪಿಸುತ್ತಿದ್ದಾರೆ. ಹಾಲಿನ ದರ,ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನ ತತ್ತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಸರಕಾರ ಇದ್ದಾಗ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೀಡಲಾಗುತ್ತಿತ್ತು,ಆದರೆ ಅದನ್ನೂ ರದ್ದು ಮಾಡಿದ್ದಾರೆ. ರಾಜ್ಯದಲ್ಲಿ ನೂರಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಕಾಂಗ್ರೆಸ್ ಸರಕಾರವು 100 ದಿನಗಳ ಆಡಳಿತ ಅವಧಿಯಲ್ಲಿ 5 ಗ್ಯಾರಂಟಿ ಅನುಷ್ಠಾನವನ್ನೇ ವಿಷಯವನ್ನಾಗಿ ಮಾಡಿಕೊಂಡು ಸಂಭ್ರಮಕ್ಕೆ ಮುಂದಾಗಿದೆ. ಸರಕಾರವು ರಾಜ್ಯದಲ್ಲಿ ಸಮಸ್ಯೆಗಳೇ ಇಲ್ಲ ಎಂಬಂತೆ ಸಂಭ್ರಮದಲ್ಲಿ ತೊಡಗಿದೆ ಎಂದು ಅವರು ಟೀಕಿಸಿದ್ದಾರೆ.
ರಾಜ್ಯದಲ್ಲಿ ನೂರಾರು ಸಮಸ್ಯೆಗಳಿದ್ದು ಈ ಎಲ್ಲಾ ಕಾರಣದಿಂದ ಇಂದು ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ರವಿಕುಮಾರ್ ತಿಳಿಸಿದ್ದಾರೆ.
ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ಎಲ್ಲಾ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

