ಬೆಂಗಳೂರು: ಮುಂದಿನ ಬಜೆಟ್‍ನಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವೃದ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಿ
ಮುಂದಿನ ಬಜೆಟ್‍ನಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ರವಿವಾರ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೆ ಇಹಲೋಕ ತ್ಯಜಿಸಬೇಕು.ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೆ ಹಿರಿಯರಿಗೆ ನಾವು ನೀಡುವ ಗೌರವ. ಎಷ್ಟು ವರ್ಷ ಬದುಕುತ್ತೇವೆ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದರು.