ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮಂಗಳಾದೇವಿ ದಸರಾ ಮಹೋತ್ಸವದಲ್ಲಿ ಹಿಂದೂಗಳ ಸ್ಟಾಲ್ಗಳಿಗೆ ಭಗವಾಧ್ವಜ ಕಟ್ಟಬೇಕು. ಭಗವಾಧ್ವಜ ಇದ್ದ ಮಳಿಗೆಗಳಲ್ಲಿ ಮಾತ್ರವೇ ಹಿಂದೂಗಳು ವ್ಯಾಪಾರ ನಡೆಸಬೇಕು ಎಂಬ ಪ್ರಕಟಣೆ ಹೊರಡಿಸಿದ್ದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಪ್ರಕಟಣೆ ಹೊರಡಿಸಲಾಗಿದೆ ಎಂಬ ದೂರಿನಲ್ಲಿ ಹುರುಳಿಲ್ಲ. ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲು ಮಾಡಿಕೊಂಡಿರುವ ಈ ಪ್ರಕರಣ ರಾಜಕೀಯ ಪ್ರೇರಿತವಾಗಿದೆ ಮತ್ತು ದುರುದ್ದೇಶದಿಂದ ಕೂಡಿದೆ. ಆದ್ದರಿಂದ, ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿತು. ಈ ಕುರಿತಂತೆ ಶರಣ್ ಪಂಪ್‌ವೆಲ್ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ ಪ್ರತಿವಾದಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.