ಬೆಳಗಾವಿ : ಕಾಂಗ್ರೆಸ್ ಪಕ್ಷದ ಭಯದಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯ್ಲಿ ವ್ಯಂಗ್ಯವಾಡಿದ್ದಾರೆ. ಭಾರತೀಯ ಜನತಾ ಪಕ್ಷ ಹಾಗೂ ಜೆಡಿಎಸ್ ನವರ ಬಣ್ಣ ಬಯಲಾಗಿದೆ. ಹೊಂದಾಣಿಕೆ ಆಗದಿದ್ದರೆ ನಮಗೆ ಉಳಿಗಾಲವಿಲ್ಲ ಎನ್ನುವ ಕಾರಣಕ್ಕಾಗಿ ಮೈತ್ರಿ ಮಾಡಿಕೊಂಡಿದ್ದು ಈ ಮೈತ್ರಿಯಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ ಎಂದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಜತೆ ಮಾತನಾಡಿದ ಮೊಯ್ಲಿ, ಗೃಹಸಚಿವ ಪರಮೇಶ್ವರ್ ಅವರ ಮನೆಗೆ ತೆರಳಿದ್ದ ಕುರಿತು ಪ್ರತಿಕ್ರಿಯಿಸಿದ ಅವರು, ಡಿನ್ನರ್ ಗೆ ಎಲ್ಲರನ್ನೂ ಕರೆಯಬೇಕು ಅಂತ ಏನಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯಾದಂತಹ ಭಿನ್ನಮತವಿಲ್ಲ. ಡಿಕೆ ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಗ್ಗೆ ಪರಮೇಶ್ವರರನ್ನೇ ಕೇಳಿ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಇರ್ತಾರ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಹೈಕಮಾಂಡ್ ಅಲ್ಲ ಆದರೆ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂದು ತಿಳಿಸಿದರು.
ಸಚಿವ ಸತೀಶ್ ಜಾರಕಿಹೊಳಿ ದುಬೈ ಪ್ರವಾಸ ಹೋಗುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸತೀಶ್ ಜಾರಕಿಹೊಳೆ ಜೊತೆ ನಾನು ಯಾವುದೇ ರೀತಿಯಾಗಿ ಚರ್ಚೆ ನಡೆಸಿಲ್ಲ. ಜಾರಕಿಹೊಳಿ ಅವರ ವೈಯಕ್ತಿಕ ವಿಚಾರಗಳಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ನಾನು ಅಧಿಕ ಪ್ರಸಂಗದ ರಾಜಕಾರಣಿ ಅಲ್ಲ ಎಂದು ಉತ್ತರಿಸಿದರು.
ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಮೊಯ್ಲಿ ವಿಶ್ವಾಸ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ ವಿರೋಧಿ ಅಲೆ ಸೃಷ್ಟಿಯಾಗಿದೆ.ಕಾಂಗ್ರೆಸ್ ಮುಳುಗಿಸಲು ಹೊರಟವರು ರಾಜ್ಯದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದಾರೆ,ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಅಧಿಕಾರಕ್ಕೆ ಬರುತ್ತದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.