ಬೆಂಗಳೂರು: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ. ಲೀಲಾವತಿ ಆರೋಗ್ಯ ಕ್ಷೀಣಿಸುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಇಂದು ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಹೀಗಾಗಿ ನೆಲಮಂಗಲ ಆಸ್ಪತ್ರೆ ದಾಖಲಿಸಲಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಲೀಲಾವತಿ ಇಂದು, 08 ಡಿಸೆಂಬರ್ 2023ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ, ಇತ್ತೀಚೆಗಷ್ಟೇ ಜೀವಮಾನದ ಸಾಧನೆಗಾಗಿ ನಂದಿ ಪ್ರಶಸ್ತಿಗೆ ಭಾಜನರಾಗಿದ್ದ ನಟಿ ಲೀಲಾವತಿ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ನಟಿ ಲೀಲಾವತಿಯವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು
1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್ಕುಮಾರ್, ವಿಷ್ಣುವರ್ಧನ್ ಮುಂತಾದವರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
1953ರಲ್ಲಿ ಬಿಡುಗಡೆಯಾಗಿದ್ದ ‘ಚಂಚಲ ಕುಮಾರಿ’ ಚಿತ್ರದ ಮೂಲಕ ಲೀಲಾವತಿ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ ಕನ್ನಡ, ತೆಲುಗು, ಮಲಯಾಳಂ, ತುಳು ಮುಂತಾದ ಭಾಷೆಗಳಲ್ಲಿ ನಟಿಸಿ ಲೀಲಾವತಿ ಸೈ ಎನಿಸಿಕೊಂಡರು. ‘ಮದುವೆ ಮಾಡಿನೋಡು’ ಮತ್ತು ‘ಸಂತ ತುಕಾರಾಮ್’ ಸಿನಿಮಾಗಳಿಗೆ ಲೀಲಾವತಿ ಅವರು 2 ರಾಷ್ಟ್ರ ಪ್ರಶಸ್ತಿ ಪಡೆದಿದ್ದರು.ಲೀಲಾವತಿ ಅವರು ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು, ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದು ಕನ್ನಡದ ಕಂದ ಚಿತ್ರಕ್ಕೆ ಫಿಲ್ಮ್ ಫೇರ್ ಪ್ರಶಸ್ತಿ ಕೂಡ ಸಿಕ್ಕಿತ್ತು. ಜೀವಮಾನ ಸಾಧನೆಗಾಗಿ 1999ರಲ್ಲಿ ಲೀಲಾವತಿ ಅವರು ಡಾ. ರಾಜ್ಕುಮಾರ್ ಪ್ರಶಸ್ತಿ ಪಡೆದರು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿತ್ತು.
ಹಿರಿಯ ನಟಿ ಲೀಲಾವತಿ ಅವರು ಐದು ಭಾಷೆಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇಂದು ಇಹಲೋಕ ತ್ಯಜಿಸಿರುವ ನಟಿ ಲೀಲಾವತಿ ಪಾರ್ಥಿವ ಶರೀರವನ್ನು ನೋಡಲು ಕನ್ನಡ ಚಿತ್ರರಂಗದ ದಿಗ್ಗಜರು ಸೇರಿದಂತೆ ಹಲವು ಹಿರಿಕಿರಿಯ ನಟನಟಿಯರು ಹೋಗುತ್ತಿದ್ದಾರೆ. ಬೆಂಗಳೂರಿನ ನೆಲಮಂಗಲದ ಸಮೀಪ ಇರುವ ಸೋಲದೇವನಹಳ್ಳಿಯಲ್ಲಿ ಲೀಲಾವತಿ ಅವರ ನಿವಾಸವಿದೆ.
ನೆಲಮಂಗಲದ ಬಳಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟಿ ಲೀಲಾವತಿಗೆ ಅಂತಿಮ ನಮನ ಸಲ್ಲಿಸಲು ಚಿತ್ರರಂಗದ ಹಲವಾರು ತಾರೆಗಳು ಈಗಾಗಲೇ ಅವರ ಮನೆ ಕಡೆ ಧಾವಿಸಿ ಹೋಗುತ್ತಿದ್ದಾರೆ.