Share this news

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5 ಸಾವಿರ ರೂ. ಗಳಿಂದ ಗರಿಷ್ಠ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೇ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ. ಈ ಮೂಲಕ ವೇತನ ಹೆಚ್ಚಳಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯದ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಶುಭಸುದ್ಧಿ ನೀಡಿದೆ

ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಮಾಜಿ ಶಾಸಕ ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಇದರೊಂದಿಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಡು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.

ಇದರೊಂದಿಗೆ ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ, ವೈಟೇಜ್ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿಸಿ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗಯವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಿಗೆ ಮನವಿ ಮಾಡಿದರು.

 

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *