Share this news

ಉಡುಪಿ: ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯಿಂದ ಕಂಗೆಟ್ಟಿರುವ ಕಾಂಗ್ರೆಸ್ಸಿನ ದುಸ್ಥಿತಿ ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲಾ ಎಂಬಂತಾಗಿದೆ. ಅಂದು ಸೋನಿಯಾ ಗಾಂಧಿ ಮೋದಿಯವರನ್ನು ಸಾವಿನ ವ್ಯಾಪಾರಿ ಎಂದಿದ್ದರು, ಖರ್ಗೆ ಮೋದಿಯವರನ್ನು ವಿಷ ಸರ್ಪ ಎಂದಿದ್ದರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಂತೂ ಏಕವಚನದಲ್ಲೇ ಮಾತನಾಡುತ್ತಾರೆ, ಅದರ ಮುಂದುವರಿದ ಭಾಗವಾಗಿ ಈಗ ಸಚಿವ ಶಿವರಾಜ್‌ ತಂಗಡಗಿ ಮೋದಿ ಬೆಂಬಲಿಸುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎನ್ನುವ ದರ್ಪದ ಮಾತು ಹೇಳಿದ್ದಾರೆ. ಶಿವರಾಜ್ ತಂಗಡಗಿ ತಾಕತ್ತಿದ್ದರೆ ಮೋದಿ ಮೋದಿ ಎನ್ನುವ ಕೋಟ್ಯಾಂತರ ಮೋದಿ ಅಭಿಮಾನಿಗಳನ್ನು ಮುಟ್ಟಿ ನೋಡಲಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಸವಾಲು ಹಾಕಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸೋಲು ನಿಶ್ಚಿತ ಎಂದು ಗೊತ್ತಾಗಿದ್ದು ಕಾಂಗ್ರೆಸ್‌ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದೆ. ದೇಶದಲ್ಲಿ ಪಾತಾಳಕ್ಕೆ ಕುಸಿದಿರುವ ಕಾಂಗ್ರೆಸ್‌, ರಾಜ್ಯದಲ್ಲೂ ಪಾತಾಳಕ್ಕಿಳಿಯುವ ಭಯದಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ. ದೇಶದ ಯುವಜನತೆ ಮೋದಿ ಆಡಳಿತವನ್ನು ಮೆಚ್ಚಿ ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಿಯನ್ನಾಗಿಸಲು ತೋರುತ್ತಿರುವ ಉತ್ಸಾಹವನ್ನು ಕಾಂಗ್ರೆಸ್ಸಿಗೆ ನೋಡಲಾಗುತ್ತಿಲ್ಲ.ಮೋದಿಯವರ ಆಡಳಿತಾವಧಿಯಲ್ಲಿ ನಿರುದ್ಯೋಗದ ಪ್ರಮಾಣ ಶೇ.4.7%ರಷ್ಟು ಕುಸಿದಿದೆ. ಆರ್ಥಿಕತೆಯಲ್ಲಿ ಭಾರತ 5ನೇ ಸ್ಥಾನಕ್ಕೇರಿರುವ ಪರಿಣಾಮ ಯುವಕರಿಗೆ ಹೆಚ್ಚಿನ ಉದ್ಯೋಗವಕಾಶಗಳು ದೊರಕಿವೆ. ಅದಕ್ಕಾಗಿ ಯುವಜನತೆ ಮೋದಿ ಮೋದಿ ಎನ್ನುತ್ತಾರೆ. ಇದನ್ನು ಸಹಿಸದ ಕಾಂಗ್ರೆಸ್‌ ತೀರಾ ಕೆಳಮಟ್ಟಕ್ಕೆ ಇಳಿದು ತನ್ನ ನಾಲಿಗೆಯನ್ನು ಹರಿಬಿಟ್ಟಿದೆ.

ನರೇಂದ್ರ ಮೋದಿಯವರ ಆಡಳಿತದಲ್ಲಿ ಯುವಕರು ದೇಶದಲ್ಲೇ ನೂರಾರು ತಂತ್ರಜ್ಞಾನ ಆಧಾರಿತ ಸ್ಟಾರ್ಟ್ ಅಪ್‌ ಸಂಸ್ಥೆಗಳನ್ನು ಪ್ರಾರಂಭಿಸಿದ್ದಾರೆ. ಅದಕ್ಕಾಗಿಯೇ ಮೋದಿಗೆ ಮತ ನೀಡುತ್ತಾ ಬಂದಿದ್ದಾರೆ. ಆದರೆ ಕಾಂಗ್ರೆಸ್ಸಿನ 53 ವರ್ಷದ ನಕಲಿ ಗಾಂಧಿ ಕುಟುಂಬದ ಯುವರಾಜನಿಂದ ಮಾತ್ರ ಯಾವುದೇ ಉದ್ಯೋಗ ಸೃಷ್ಟಿಯಾಗಿಲ್ಲ. 2022-23 ರಲ್ಲಿ 5.20 ಲಕ್ಷ ಯುವಕರು ಪದವಿ ಪಡೆದಿದ್ದಾರೆ, ಆದರೆ ಕಾಂಗ್ರೆಸ್ಸಿನ ಯುವ ನಿಧಿ ಯೋಜನೆಯಡಿ ಕೇವಲ 3,500 ಯುವಕರಿಗೆ ಭತ್ತೆ ಸಿಕ್ಕಿದೆ. ಯುವಕರಿಗೆ ಸುಳ್ಳು ಹೇಳಿ ಮೋಸ ಮಾಡಿದ ಕಾಂಗ್ರೆಸ್‌ ರಾಜ್ಯದ ಯುವ ಜನತೆಯ ಕ್ಷಮೆ ಕೇಳಬೇಕು.

ಸುಮಾರು 1.84 ಕೋಟಿ ಮೊದಲ ಬಾರಿಗೆ ಮತ ಚಲಾಯಿಸುವವರು ಮೋದಿಯವರ ಜೊತೆಗಿದ್ದಾರೆ. 20-29 ವರ್ಷ ವಯಸ್ಸಿನ ಯುವಕರು 19.74 ಕೋಟಿ ಮತದಾರರು ಮೋದಿಯವರ ಬಗ್ಗೆ ಒಳ್ಳೆಯ ಮಾತನಾಡುತ್ತಿದ್ದಾರೆ, ಅದಕ್ಕಾಗಿಯೇ ಕಾಂಗ್ರೆಸ್ ಹೆದರುತ್ತಿದೆ. ಮೋದಿ ಪರ ಘೋಷಣೆ ಕೂಗಿದವರಿಗೆ ಕಪಾಳ ಮೋಕ್ಷ ಮಾಡುವ ಸಚಿವರ ಕರೆ ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಆದರ್ಶಗಳಿಗೆ ವಿರುದ್ಧವಾಗಿದೆ. ಇದು ಕಾಂಗ್ರೆಸ್ ಪಕ್ಷದ ನೀತಿಯಲ್ಲಿ ಆತಂಕಕಾರಿ ಬದಲಾವಣೆಯನ್ನು ಸೂಚಿಸುತ್ತದೆ ಎಂದು ಮುಟ್ಲುಪಾಡಿ ವಾಗ್ದಾಳಿ ನಡೆಸಿದ್ದಾರೆ.

ಮಾರ್ಚ್ 25 ರಂದು ಕಾಂಗ್ರೆಸ್ಸಿನ ಮುಖ್ಯ ವಕ್ತಾರೆ ಸುಪ್ರಿಯಾ ಶ್ರಿನಾಟೆ ಇನ್ಸ್ಟಾಗ್ರಾಮ್ ನಲ್ಲಿ ಕಂಗನಾ ರಣಾವತ್‌ ಅವರ ಚಿತ್ರದೊಂದಿಗೆ “ಮಂಡಿಯಲ್ಲಿ ಪ್ರಸ್ತುತ ದರ ಎಷ್ಟು?” ಎಂದು ಪೋಸ್ಟ್ ಮಾಡಿದ್ದರು. ಹೆಣ್ಣು ಮಕ್ಕಳ ಬಗ್ಗೆ ಬಳಸುವ ಕೀಳು ಮಟ್ಟದ ಬಾಷೆ ಕಾಂಗ್ರೆಸ್ ಪಕ್ಷದ ಯೋಗ್ಯತೆಯನ್ನು ತೋರಿಸುತ್ತದೆ ಎಂದಿದ್ದಾರೆ.

ಮಹಿಳಾ ಸಬಲೀಕರಣದ ಬಗ್ಗೆ ಉದ್ದುದ್ದ ಬಾಷಣ ಮಾಡುವ ರಾಹುಲ್‌ ಗಾಂಧಿ, ತನ್ನ ಪಕ್ಷದ ವಕ್ತಾರೆಯ ಮಾತನ್ನು ಖಂಡಿಸಿಲ್ಲ. ಕಾಂಗ್ರೆಸ್‌ ಪಕ್ಷ ರಾಜೀವ್‌ ಗಾಂಧಿ ಕಾಲದಿಂದಲೂ ಮಹಿಳಾ ವಿರೋಧಿ ಧೋರಣೆಯನ್ನು ಅನುಸರಿಸಿಕೊಂಡು ಬಂದಿದೆ. ಅಂದು ಶಾ ಬಾನು ಪ್ರಕರಣದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಜೀವನಕ್ಕೆ ಕೊಳ್ಳಿ ಇಟ್ಟಿತ್ತು. ಸಂಸ್ಕೃತಿಯ ಗಂಧ ಗಾಳಿಯ ಅರಿವಿಲ್ಲದ ಶಿವರಾಜ್ ತಂಗಡಗಿಗೆ ಕಾoಗ್ರೆಸ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೊಣೆ ನೀಡಿರುವುದು ನಾಚಿಕೆಗೇಡು ಎಂದು ಬಿಜೆಪಿ ವಕ್ತಾರ ಮುಟ್ಲುಪಾಡಿ ವಾಗ್ದಾಳಿ ನಡೆಸಿದ್ದಾರೆ

 

 

 

Leave a Reply

Your email address will not be published. Required fields are marked *