ಶಿವಮೊಗ್ಗ:ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೇನು ಆರಂಭವಾಗಲಿದ್ದು,ಈಗಾಗಲೇ ಶಾಲಾ ದಾಖಲಾತಿ ಆರಂಭಗೊಂಡಿದೆ. ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ಪಡೆದರೆ ಅಂತಹ ಶಾಲೆಗಳ ಮಾನ್ಯತೆಯನ್ನೇ ರದ್ದುಗೊಳಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅವರು ಶನಿವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಖಾಸಗಿ ಶಾಲೆಗಳು ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಶುಲ್ಕ ತೆಗೆದುಕೊಳ್ಳಬೇಕು. ಈ ಮೂಲಕ ಬಡ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು, ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅದರ ಹೊರತಾಗಿ ದುಪ್ಪಟ್ಟು ಫೀಸ್ ತೆಗೆದುಕೊಂಡಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಶಾಲಾ ಮಾನ್ಯತೆಯನ್ನು ರದ್ದುಪಡಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ






