ಹುಬ್ಬಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಾದ್ಯಂತ ಬರೋಬ್ಬರಿ 490 ಕೊಲೆಗಳು ಹಾಗೂ 600ಕ್ಕೂ ಅಧಿಕ ರೈತರ ಆತ್ಮಹತ್ಯೆಗಳಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಭೀಕರವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಜನಸಾಮಾನ್ಯರಿಗೆ ಹಾಗೂ ರೈತರಿಗೆ ರಕ್ಷಣೆ ಇಲ್ಲದಂತಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಪ್ರಕರಣಗಳಾಗಿವೆ ಅಂತಾ ಹುಡುಕಲು ಅಧಿಕಾರಿಗಳನ್ನು ನೇಮಿಸುತ್ತಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಅನೇಕ ಬಡಜನರು ತಮ್ಮ ಮಕ್ಕಳನ್ನ ಕಾಲೇಜಿಗೆ ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ಗಂಭೀರ ಘಟನೆ ನಡೆದಾಗ ಯಾರೋ ಒಬ್ಬ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ ಕೈತೊಳೆದುಕೊಳ್ಳಬಾರದು. ಇಂತಹ ಘಟನೆಗಳಿಂದ ಜನರು ಭಯಗೊಂಡಿದ್ದಾರೆ. ಜನರೇ ಬಂದು ಹೋರಾಟ ಮಾಡುವ ಪರಿಸ್ಥಿತಿಯನ್ನು ಸರ್ಕಾರ ತಂದುಕೊಳ್ಳಬಾರದು.
ರಾಜ್ಯದಲ್ಲಿ ಗಾಂಜಾ ಅಫೀಮು ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆಗ್ತಿಲ್ಲ. ಈ ಸರ್ಕಾರದಲ್ಲಿ ಹತ್ಯೆ ಹಾಗೂ ಆತ್ಮಹತ್ಯೆ ಪ್ರಕರಣಗಳೇ ಹೆಚ್ಚಾಗುತ್ತಿದ್ದು, ಅಭಿವೃದ್ದಿಯು ಸಮಾಧಿಯಾಗಿದೆ ಎಂದು ಸಚಿವ ಜೋಶಿ ಆಕ್ರೋಶ ವ್ಯಕ್ತಪಡಿಸಿದರು