ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಹಾಗೂ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯು ಇಂದು (ಶುಕ್ರವಾರ) ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಬೆಳಗ್ಗೆ 10.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಶಾಸಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಸುಮಾರು 10 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಪ್ರತಿಭಟನಾ ಸಭೆ ನಂತರ ಪಾದಯಾತ್ರೆ ಮೂಲಕ ಎಂಡಿಎ ಕಚೇರಿ ಆವರಣಕ್ಕೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೊಂದೆಡೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮುತ್ತಿಗೆ ಹಾಕುವ ಬಿಜೆಪಿಯವರಿಗೆ ನಾವು ಮುತ್ತಿಗೆ ಹಾಕುತ್ತೇವೆ ಎಂದು ಕೆಪಿಸಿಸಿ ವಕಾರ ಎಂ.ಲಕ್ಷ್ಮಣ ತಿಳಿಸಿದ್ದಾರೆ. ಜು.12ರ ಬೆಳಗ್ಗೆ 10ಕ್ಕೆ ಎಂಡಿಎ ಆವರಣದಲ್ಲಿ ನಾವು ಪ್ರತಿಭಟನೆ ಮಾಡುತ್ತೇವೆ. ಈ ವೇಳೆ ಬಿಜೆಪಿಯವರು ಕಚೇರಿಗೆ ಮುತ್ತಿಗೆ ಹಾಕಲು ಬಂದರೆ ನಾವು ಅವರಿಗೇ ಮುತ್ತಿಗೆ ಹಾಕುತ್ತೇವೆ. ಯಾವುದೇ ಹಗರಣ, ಲೋಪ ನಡೆಯದ ಪ್ರಕರಣದಲ್ಲಿ ಬಿಜೆಪಿಗರು ಅನಗತ್ಯವಾಗಿ ವಿವಾದ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.