ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಗರಣದ ಸಂಬAಧ ನಿನ್ನೆ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ತನಿಖೆ ಅಗತ್ಯವೆಂದು ಹೇಳಿರುವ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಖಾಸಗಿ ದೂರುಗಳಿಗೆ ಮತ್ತೆ ಜೀವ ಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿರುವುದರಿಂದ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೂಡಾ ತನಿಖೆಗೆ ಆದೇಶಿಸುವ ಸಾಧ್ಯತೆ ಹೆಚ್ಚಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹೈಕೋರ್ಟ್ ಆದೇಶದ ಪ್ರತಿ ಸಲ್ಲಿಸಲಿರುವ ದೂರುದಾರರು ಪ್ರಕರಣವನ್ನು ತನಿಖೆಗೆ ವಹಿಸುವಂತೆ ವಾದಿಸಲಿದ್ದಾರೆ. ತನಿಖೆ ಬಗ್ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಮಾನಿಸಲಿದ್ದಾರೆ. ಯಾವ ಸಂಸ್ಥೆ ತನಿಖೆ ನಡೆಸಬೇಕೆಂದು ಕೋರ್ಟ್ ನಿರ್ಧರಿಸಲಿದೆ. ಕೋರ್ಟ್ ತನಿಖೆಗೆ ಆದೇಶಿಸಿದರೆ ಸಿಎಂ ವಿರುದ್ಧ ಎಫ್‌ಐಆರ್ ದಾಖಲಾಗಲಿದೆ.
ಈ ನಡುವೆ ಮೇಲ್ಮನವಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸಹ ಸಿದ್ಧತೆ ನಡೆಸಿದ್ದು, ಮುಂದಿನ ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ. ಒಂದು ವೇಳೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ತಡೆಯಾಜ್ಞೆ ಸಿಗದಿದ್ದರೆ, ಸುಪ್ರೀಂಕೋರ್ಟ್ ಮೆಟ್ಟಿಲೇರಲೂ ಸಿದ್ದರಾಮಯ್ಯ ಪರ ವಕೀಲರ ತಂಡ ಸಿದ್ಧತೆ ನಡೆಸಿದೆ. ಎಫ್‌ಐಆರ್ ದಾಖಲಾದರೂ ಅದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲು ಸಿಎಂ ಸಿದ್ದರಾಗಿದ್ದಾರೆ.
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ, ನಾನೇಕೆ ರಾಜೀನಾಮೆ ಕೊಡಬೇಕು ಎಂದು ಗುಡುಗಿದ್ದಾರೆ. ಅಂತಿಮವಾಗಿ ಸತ್ಯಕ್ಕೆ ಜಯ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇತ್ತ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸುವುದಾಗಿ ಹೇಳಿದೆ.







in 
