ಬೆಂಗಳೂರು: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಘಟನೆಯ ಹಿನ್ನಲೆ:
2023 ರ ಸೆಪ್ಟೆಂಬರ್ 24 ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ-ಮರ್ದಾಳ ರಸ್ತೆಯಲ್ಲಿರುವ ಮಸೀದಿ ಆವರಣಕ್ಕೆ ನುಗ್ಗಿದ್ದ ಕೆಲವು ಅಪರಿಚಿತ ವ್ಯಕ್ತಿಗಳು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗಿದ್ದರು. ಬ್ಯಾರಿ ಸಮುದಾಯಕ್ಕೆ ಸೇರಿದವರನ್ನು ಬದುಕಲ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. “ಜೈ ಶ್ರೀರಾಮ್” ಎಂದು ಘೋಷಣೆ ಕೂಗಿರುವ ಈ ವ್ಯಕ್ತಿಗಳು ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ನಂತರ, ದಕ್ಷಿಣ ಕನ್ನಡದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನಿವಾಸಿ ಕೀರ್ತನ್ ಕುಮಾರ್ ಮತ್ತು ಎನ್‌ಎಂ ಸಚಿನ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 447, 295 ಎ 505 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಜೈ ಶ್ರೀರಾಮ ಘೋಷಣೆ ಪ್ರಕರಣದ ಆರೋಪಿಗಳು ಹೈಕೋರ್ಟ್ಗೆ ಮೊರೆ ಹೋಗಿದ್ದರು. ತಮ್ಮ ವಿರುದ್ಧದ ಆರೋಪಗಳಿಗೆ ಅಗತ್ಯವಾದ ಯಾವುದೇ ಅಂಶಗಳು ಪ್ರಕರಣದಲ್ಲಿ ಇಲ್ಲ ಎಂದು ಅವರು ಪ್ರತಿಪಾದಿಸಿದ್ದರು. ಮಸೀದಿಯು ಸಾರ್ವಜನಿಕ ಸ್ಥಳವಾಗಿರುವುದರಿಂದ ಅದರ ಆವರಣಕ್ಕೆ ಪ್ರವೇಶವನ್ನು ಕ್ರಿಮಿನಲ್ ಅತಿಕ್ರಮಣ ಎಂದು ಅರ್ಥೈಸಲಾಗುವುದಿಲ್ಲ ಎಂದು ಆರೋಪಿಗಳ ಪರ ವಕೀಲರು ವಾದಿಸಿದ್ದರು. ಮತ್ತೊಂದೆಡೆ, ಮಸೀದಿಯ ಆವರಣದಲ್ಲಿ “ಜೈ ಶ್ರೀರಾಮ್” ಎಂದು ಕೂಗುವಂತಿಲ್ಲ ಮತ್ತು ಬೆದರಿಕೆ ಹಾಕುವಂತಿಲ್ಲ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.