ಬೆಂಗಳೂರು :ಉಡುಪಿ ಜಿಲ್ಲೆಯ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪ್ರತಿಮೆ ನಿರ್ಮಿಸಲಾಗಿದೆ ಎನ್ನುವ ಪ್ರಕರಣದ ಕುರಿತು ದಾಖಲಾಗಿದ್ದ ಎಫ್ ಐ ಆರ್ ರದ್ದು ಕೋರಿ ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ
ಪರಶುರಾಮ ಪ್ರತಿಮೆ ಕಳ್ಳತನವಾಗಿದೆ ಎಂದು ಕೃಷ್ಣಶೆಟ್ಟಿ ಎಂಬುವವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದಲ್ಲಿ ಎಫ್‌ಐಅರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠವು ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಥೀಂ ಪಾರ್ಕ್ ಲೋಕಾರ್ಪಣೆ ಮಾಡಿದ್ದರು. ನಂತರ ದಿನಗಳಲ್ಲಿ ಕಾಮಗಾರಿ ಬಾಕಿ ಇದೆ ಎನ್ನುವ ಕಾರಣಕ್ಕೆ ಥೀಂ ಪಾರ್ಕ್ಗೆ ಪ್ರವಾಸಿಗರ ನಿಷೇಧ ಹೇರಲಾಗಿತ್ತು. ಇದು ಸ್ಥಳೀಯರು ಹಾಗೂ ಕಾಂಗ್ರೆಸ್ ಪಕ್ಷದ ಅನುಮಾನಕ್ಕೆ ಎಡೆಮಾಡಿತ್ತು. ಕಂಚಿನ ಮೂರ್ತಿಯ ಬದಲು ಫೈಬರ್ ಮೂರ್ತಿ ಸ್ಥಾಪನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.
ಆದರೆ ಜಿಲ್ಲಾಡಳಿತದ ಅನುಮತಿಯ ಬಳಿಕವೇ ಮೂರ್ತಿಯನ್ನು ತೆರವುಗೊಳಿಸಲಾಗಿತ್ತು, ಜಿಲ್ಲಾಡಳಿತದ ಈ ನಿರ್ಧಾರದ ಕುರಿತು ಸ್ಥಳೀಯರು ಹಾಗೂ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿ ತೀವ್ರ ಪ್ರತಿಭಟನೆ ನಡೆಸಿದ್ದರು. ಕೊನೆಗೆ ಮೂರ್ತಿ ಕಳ್ಳತನವಾಗಿದೆ ಎಂದು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಬಳಿಕ ಬೆಂಗಳೂರಿಗೆ ತೆರಳಿ ಕೃಷ್ಣ ನಾಯಕ್ ಅವರ ವಶದಲ್ಲಿದ್ದ ಪ್ರತಿಮೆಯ ಕೆಲವು ಬಿಡಿಭಾಗಗಳನ್ನು ವಶಪಡಿಸಿಕೊಂಡು ಕಾರ್ಕಳಕ್ಕೆ ತಂದಿದ್ದರು.