ಬೆಂಗಳೂರು: ರಾಜ್ಯದಲ್ಲಿನ 3 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ರಣಕಣ ರಂಗು ಪಡೆದಿದೆ. ಮೂರು ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು ಕಗ್ಗಂಟಾಗಿದ್ದ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಅಳೆದುತೂಗಿ ಕೊನೆಗೂ ಅಭ್ಯರ್ಥಿಯನ್ನು ಫೈನಲ್ ಮಾಡಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರು ಇಂದು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಪುತ್ರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದರೆ ಹೈಕಮಾಂಡ್, ಅಂತಿಮವಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿದೆ.
ಹಾನಗಲ್ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್ ಅಹ್ಮದ್ ಖಾನ್ ಪಠಾಣ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಯಲ್ಲಿ ಮತ್ತೆ ಯಾಸೀರ್ ಅಹ್ಮದ್ಖಾನ್ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.
ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ.