ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ತಿರುವು ಪಡೆದುಕೊಂಡಿದ್ದು, ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ.
ಮುಡಾ ಹಗರಣ ಪತಿಗೆ ಕಂಟಕವಾಗಿ ಪರಿಣಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ವಾಪಸ್ ನೀಡಿದ್ದರು. ಈ ಬೆನ್ನಲ್ಲೇ ಮೈಸೂರು ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ್ 2020ರಲ್ಲಿ 50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಮುಡಾ ನಿವೇಶನಗಳನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಶಾಸಕ ಟಿಎಸ್ ಶ್ರೀವತ್ಸ್ ಅವರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. 50:50 ಅನುಪಾತದ ನಿವೇಶನಗಳನ್ನು ಹಿಂಪಡೆಯಲು ಅಗತ್ಯ ಕ್ರಮಕೈಗೊಳ್ಳಿ ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿದ್ದಾರೆ. ಇದರಿಂದ 50:50 ಅನುಪಾತದಲ್ಲಿ ನಿವೇಶನ ಪಡೆದವರಿಗೆ ಆತಂಕ ಶುರುವಾಗಿದೆ.
ಈ ಅಕ್ರಮ ನಿವೇಶನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಚಟುವಟಿಕೆಗಳು ನಡೆಯದಂತೆ ಅದೇಶಿಸಬೇಕು ಎಂದು ಬಿಜೆಪಿ ಶಾಸಕ ಶ್ರೀವತ್ಸ್ ಪತ್ರ ಬರೆದಿದ್ದಾರೆ. ಅವರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ.































































































