Share this news

ಬೆಂಗಳೂರು: ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ ಹಲವು ಅವ್ಯವಹಾರಗಳ ಆರೋಪ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ತನಿಖೆಗೆ ಆದೇಶಿಸುವ ಮೂಲಕ ಕೌಂಟರ್ ಕೊಡಲು ಮುಂದಾಗಿದೆ. ಈ ಮಧ್ಯೆ, ಬಿಜೆಪಿ ಸರ್ಕಾರದ ವಿರುದ್ಧ ಈ ಹಿಂದೆ, ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳು ಎಂದು ಲೋಕಾಯುಕ್ತ ತನಿಖಾ ಸಂಸ್ಥೆ ವರದಿ ನೀಡಿದೆ.

ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಲೋಕಾಯುಕ್ತ ತನಿಖೆ ಅಲ್ಲಗಳೆದಿದೆ. ರಾಜ್ಯ ಗುತ್ತಿಗೆದಾರರ ಸಂಘದ ಮಾಜಿ ಉಪಾಧ್ಯಕ್ಷ ಅಂಬಿಕಾಪತಿ ಅವರ ಆರೋಪಗಳು ಆಧಾರರಹಿತ ಎಂದು ತನಿಖಾ ವರದಿ ತಿಳಿಸಿದೆ. ಬಿಬಿಎಂಪಿ ಪೂರ್ವ ವಿಭಾಗದಲ್ಲಿ ಅವರು ಯಾವುದೇ ಗುತ್ತಿಗೆ ಪಡೆದಿಲ್ಲ ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 40 ಪರ್ಸೆಂಟ್ ಕಮಿಷನ್ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎಂದು ಅಂಬಿಕಾಪತಿ ಅವರು ಆರೋಪ ಮಾಡಿದ್ದರು. ಈ 40 ಪರ್ಸೆಂಟ್ ಕಮಿಷನ್ ಆರೋಪವನ್ನು ರಾಜಕೀಯವಾಗಿ ಪ್ರಬಲ ಅಸ್ತ್ರ ಮಾಡಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದ್ದರು.

ಆದರೆ ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಿದ್ದಾರೆ. ಅಂಬಿಕಾಪತಿ ಅಂದು ಮಾಡಿದ್ದ ಆರೋಪಗಳು ಆಧಾರರಹಿತ ಎಂಬುದು ಲೋಕಾಯುಕ್ತ ತನಿಖಾ ವರದಿಯಿಂದ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *