Share this news
ಬೆಳ್ತಂಗಡಿ: ಕರಾವಳಿಯ ಪುಣ್ಯಕ್ಷೇತ್ರ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯನ್ನು ಸೇರುವ ಉಪನದಿ ಮೃತ್ಯುಂಜಯ ಹೊಳೆಗೆ ಕಿಡಿಗೇಡಿಗಳು ಗೋ ಮಾಂಸದ ತ್ಯಾಜ್ಯವನ್ನು ಎಸೆದಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ಪಶ್ಚಿಮ ಘಟ್ಟದಿಂದ ಹರಿದು ಧರ್ಮಸ್ಥಳ ಬಳಿ ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ಹೊಳೆಯಲ್ಲಿ ಮೂಟೆಗಟ್ಟಲೆ ಗೋವಿನ ರುಂಡ, ಮುಂಡ, ಚರ್ಮ ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದಿದ್ದಾರೆ ಎನ್ನಲಾಗಿದೆ.

ಪ್ರತಿನಿತ್ಯ ಲಕ್ಷಾಂತರ ಭಕ್ತರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದು, ಈ ಪೈಕಿ ಹೆಚ್ಚಿನವರು ನೇತ್ರಾವತಿ ನದಿಯಲ್ಲಿ ಪುಣ್ಯ ಸ್ನಾನ ಮಾಡುತ್ತಾರೆ. ಇಷ್ಟೇ ಅಲ್ಲದೆ, ಧರ್ಮಸ್ಥಳ ದೇಗುಲದ ಮಂಜುನಾಥ ಸ್ವಾಮಿಯ ನಿತ್ಯ ಅಭಿಷೇಕಕ್ಕೂ ನೇತ್ರಾವತಿಯ ನದಿಯ ನೀರನ್ನೇ ಬಳಸಲಾಗುತ್ತಿದೆ. ಹೀಗಾಗಿ, ಕೋಟ್ಯಂತರ ಭಕ್ತರ ನಂಬಿಕೆಗೆ ಗೋ ಹಂತಕರು ಕೊಳ್ಳಿ ಇಟ್ಟಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಚಾರ್ಮಾಡಿ ಗ್ರಾಮದ ಅನ್ನಾರ್ ಬಳಿ ನದಿಯಲ್ಲಿ ಗೋವಿನ ರುಂಡ ಮುಂಡಗಳು ಪತ್ತೆಯಾಗಿರುವುದು ಈ ಪ್ರದೇಶದ ಹಲವು ಮನೆಗಳಲ್ಲಿ ಮತ್ತು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋ ಹತ್ಯೆ ನಡೆಯುತ್ತಿರುವ ಬಗ್ಗೆ ಅನುಮಾನಗಳನ್ನು ಸೃಷ್ಟಿಸಿದೆ. ಹೀಗೆ ಗೋ ಹತ್ಯೆ ಮಾಡಿದ ಬಳಿಕ ಅವುಗಳ ಅವಶೇಷವನ್ನು ಮೂಟೆ ಕಟ್ಟಿ ನದಿಗೆ ಎಸೆಯಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

 

ನೇತ್ರಾವತಿ ನದಿಯನ್ನು ಮಲಿನಗೊಳಿಸಿದವರನ್ನು ಒಂದು ವಾರದೊಳಗೆ ಬಂಧಿಸಬೇಕೆAದು ಬಜರಂಗದಳ ಆಗ್ರಹಿಸಿದ್ದು, ಒಂದು ವೇಳೆ ತಪ್ಪಿತಸ್ಥರ ಬಂಧನವಾಗದಿದ್ದಲ್ಲಿ ಜಿಲ್ಲೆಯ ಹಿಂದೂ ನಾಯಕರಲ್ಲ ಸೇರಿ ಉಗ್ರ ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದೆ.

ಮೃತ್ಯುಂಜಯ ನದಿಯಲ್ಲಿ ಗೋವಿನ ಮೃತದೇಹ ಮತ್ತು ಅವಶೇಷಗಳು ಪತ್ತೆ ಆಗಿರುವ ಬಗ್ಗೆ ಈ ಹಿಂದೆ ಕೆಲವು ಬಾರಿ ದೂರು ನೀಡಿದ್ದರೂ ಧರ್ಮಸ್ಥಳ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಇದೀಗ ಒಮ್ಮಿಂದೊಮ್ಮೆಲೆ ೧೧ ಮೂಟೆಗೂ ಹೆಚ್ಚಿನ ಗೋಮಾಂಸ ತ್ಯಾಜ್ಯ ಪತ್ತೆಯಾಗಿರುವುದು ಸ್ಥಳಿಯರಲ್ಲಿ ಮತ್ತು ಭಕ್ತರಲ್ಲಿ ಆತಂಕ ಮೂಡಿಸಿದೆ.

 

 

Leave a Reply

Your email address will not be published. Required fields are marked *