ಮೈಸೂರು: ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಳೆದ 6 ತಿಂಗಳಿಂದ ದೊಡ್ಡ ಸಂಚಲನವನ್ನೇ ಸೃಷ್ಟಿಸಿದ್ದ ಮುಡಾ ಸೈಟ್ ಹಂಚಿಕೆ ಹಗರಣ ವಿರುದ್ಧದ ಕಾನೂನು ಹೋರಾಟದಿಂದ ಹಿಂದೆ ಸರಿಯುವುದಾಗಿ ಸ್ನೇಹಮಯಿ ಕೃಷ್ಣ ತಿಳಿಸುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನನಗೆ ತಾವೆಲ್ಲರೂ ಪ್ರಶ್ನೆ ಮಾಡುತ್ತಿದ್ದದ್ದು ಸರಿಯಷ್ಟೆ. ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ, ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ, ನನ್ನ ಕೆಲವು ಆತ್ಮೀಯ ವಕೀಲರೊಂದಿಗೆ-ಹಿತೈಷಿಗಳೊಂದಿಗೆ ಚರ್ಚೆ ನಡೆಸಿ, ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿರುತ್ತೇನೆ ಎಂದು ಎಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
‘ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮತ್ತಷ್ಟು ಕಾಲ ವಿಳಂಬ ಮಾಡುವ ಬದಲು, ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ, ನನ್ನ ಬಳಿ ಇರುವ ಮತ್ತು ಮತ್ತು ಲಭ್ಯವಾಗುವ ಸಾಕ್ಷಾಧಾರಗಳನ್ನು ಆಧರಿಸಿ, ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದೆ’ ಎಂದರು.
‘ಹೀಗಾಗಿ ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು, ಅವಶ್ಯಕತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು, ಖುದ್ದಾಗಿ ನಾನೇ ಮಾನ್ಯ ನ್ಯಾಯಾಲಯಕ್ಕೆ ಸಾಕ್ಷಾಧಾರಗಳನ್ನು ಒದಗಿಸಿ ವಾದ ಮಂಡನೆ ಮಾಡುತ್ತೇನೆ. ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನಿರ್ಧರಿಸಿದ್ದೇನೆ’ ಎಂದು ತಿಳಿಸಿದ್ದಾರೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.