ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂಮಾಲೀಕ ದೇವರಾಜುಗೆ ನೋಟಿಸ್ ಜಾರಿ ಮಾಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿ.ಎಂ ಅವರಿಗೆ 14 ನಿವೇಶನಗಳನ್ನು ಅಕ್ರಮ ಹಂಚಿಕೆ ಬಗ್ಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಈಗಾಗಲೇ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆದರೆ ಲೋಕಾಯುಕ್ತ ಪಾರದರ್ಶಕ ತನಿಖೆ ನಡೆಸಿಲ್ಲ ಎಂದು ಆರೋಪಿಸಿದ ಸ್ನೇಹಮಯಿ ಕೃಷ್ಣ ಅವರು, ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆ(ಸಿಬಿಐ)ಗೆ ವರ್ಗಾಯಿಸಬೇಕೆಂಬ ಮನವಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಫೆಬ್ರವರಿ 7 ರಂದು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.
ಬುಧವಾರ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯ ಸಂಬಂಧ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದ ಮಲ್ಲಿಕಾರ್ಜನ ಸ್ವಾಮಿ, ಭೂಮಾಲೀಕ ದೇವರಾಜು, ಸಿಬಿಐ, ಕೇಂದ್ರ ಗೃಹ ಇಲಾಖೆ, ಲೋಕಾಯುಕ್ತ ಪೊಲೀಸರಿಗೂ ನೋಟಿಸ್ ನೀಡಿದೆ. ಏಪ್ರಿಲ್ 28ಕ್ಕೆ ವಿಚಾರಣೆ ಮುಂದೂಡಿದೆ.