

ಬೆಂಗಳೂರು:ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಮುಡಾದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶಗಳನ್ನು ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ನ್ಯಾ. ವಿ.ಕಾಮೇಶ್ವರ ರಾವ್ ಹಾಗೂ ಸಿ.ಎಂ.ಜೋಶಿ ಅವರಿದ್ದ ಪೀಠ ಸೂಚನೆ ನೀಡಿದೆ. ವಿಭಾಗೀಯ ಪೀಠ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ನಂತರ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಪ್ರಕರಣ ದೊಡ್ಡ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ಪತ್ನಿ ಪಾರ್ವತಿ ಸೈಟ್ಗಳನ್ನು ಮುಡಾಕ್ಕೆ ವಾಪಸ್ ನೀಡಿದ್ದರು. ಉಳಿದಂತೆ, ಮುಡಾ ಹಗರಣದಲ್ಲಿನ ಹಣಕಾಸು ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಅಕ್ರಮವಾಗಿ ಹಂಚಿಕೆಯಾದ ಸೈಟ್ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಸದ್ಯ ಇಡಿ ತನಿಖೆ ಪ್ರಗತಿಯಲ್ಲಿದೆ



