ಶಿವಮೊಗ್ಗ,ಅ.22:ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಸಂಖ್ಯೆಯನ್ನು 800ಕ್ಕೆ ಹೆಚ್ಚಳ ಮಾಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ಬುಧವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 3000ಕೋಟಿ ರೂ.ಗಳ ಅಂದಾಜು ವೆಚ್ಚದ ಕರ್ನಾಟಕ ಪಬ್ಲಿಕ್ ಶಾಲೆ ಮಹತ್ವದ ಯೋಜನೆಗೆ ಶಿವಮೊಗ್ಗದಲ್ಲಿಯೇ ಚಾಲನೆ ದೊರೆಯಲಿದೆ.ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 200 KPS ಶಾಲೆಗಳನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದೆ. ಇದರಿಂದಾಗಿ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ ಕ್ಷೇತ್ರದ ಪ್ರಗತಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಿದೆ ಎಂದರು.
ಪಬ್ಲಿಕ್ ಸ್ಕೂಲ್ ಯೋಜನೆಯ ಅನುಷ್ಠಾನದಿಂದಾಗಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ, ಒಂದೇ ಶಾಲಾ ಆವರಣದಲ್ಲಿ 14ವರ್ಷದವರೆಗೆ ಎಲ್ಲಾ ರೀತಿಯ ಶಿಕ್ಷಣ, 01ರಿಂದ 05ರವರೆಗೆ ಕನ್ನಡ ಕಡ್ಡಾಯ ಹಾಗೂ ದ್ವಿಭಾಷಾ ಕಲಿಕೆಗೆ ಅವಕಾಶ, ಮಕ್ಕಳ ಭಾಷಾ ಕಲಿಕೆಯನ್ನಾಧರಿಸಿ, 6ನೇ ತರಗತಿಯ ನಂತರ ಮಾಧ್ಯಮ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲಾ ಶಾಲೆಗಳನ್ನು ಸ್ಮಾರ್ಟ್ ಶಾಲೆಗಳನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇಂತಹ ಶಾಲೆಗಳಲ್ಲಿ ಏಕಕಾಲಕ್ಕೆ ಒಂದು ಕೇಂದ್ರದಿಂದ ವಿಶೇಷ ತರಗತಿ, ಉಪನ್ಯಾಸಗಳನ್ನು ನೀಡಬಹುದಾಗಿದೆ. ಅಂತಹ ಶಾಲೆಗಳ ಉಸ್ತುವಾರಿಗಾಗಿ ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ರಚಿಸಿ ನಿರ್ವಹಣೆಯ ಹೊಣೆಗಾರಿಕೆ ನೀಡಲಾಗುವುದು ಎಂದರು.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಗೊಂಡ ಶಿಕ್ಷಕರ ಸಂಖ್ಯೆ ಅತ್ಯಲ್ಪ. ಶಿಕ್ಷಕರ ಕೊರತೆಯನ್ನು ನೀಗಿಸಲು ಸರ್ಕಾರವು ದಿಟ್ಟ ಹೆಜ್ಜೆ ಇರಿಸಿದ್ದು, ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ 13 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಅರ್ಹ ಪದವೀಧರರಿಗೆ ಡಿಸೆಂಬರ್ 07ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಇಲಾಖೆಯು ಅಕ್ಟೋಬರ್ 23ರಂದು ಅಧಿಸೂಚನೆ ಪ್ರಕಟಿಸಲಿದ್ದು, ಪರೀಕ್ಷೆಯಲ್ಲಿ ಹಾಜರಾಗಲಿಚ್ಚಿಸುವ ಅರ್ಹ ಪದವೀಧರರು ನವೆಂಬರ್ 09ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಅಲ್ಲದೇ ಪ್ರಸ್ತುತ ಶಿಕ್ಷಕರ ಕೊರತೆಯನ್ನು ನೀಗಿಸಲು ಅತಿಥಿ ಶಿಕ್ಷಕರನ್ನು ಸಕಾಲದಲ್ಲಿ ನೇಮಿಸಿಕೊಂಡು ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ಅಡಚಣೆಯಾಗದಂತೆ ಕ್ರಮ ವಹಿಸಲಾಗಿದೆ. ಹೊಸ ಶಿಕ್ಷಕರ ನೇಮಕಾತಿಯಿಂದಾಗಿ ಆಡಳಿತಾರೂಢ ಸರ್ಕಾರದ ಅವಧಿಯಲ್ಲಿ ಸುಮಾರು 26 ಸಾವಿರ ಶಿಕ್ಷಕರನ್ನು ನೇಮಕಾತಿ ನಡೆಸಿದಂತಾಗುತ್ತದೆ ಎಂದ ಅವರು,SSLC ಯಲ್ಲಿ ವಿದ್ಯಾರ್ಥಿಗಳಿಗೆ ಉತ್ತೀರ್ಣಗೊಳಿಸಲು ನಿಗದಿಪಡಿಸಿದ ಅಂಕವನ್ನು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ, ಶೇ.33ಕ್ಕೆ ಮರುನಿಗದಿಪಡಿಸಲಾಗಿದೆ. ಅದಕ್ಕಾಗಿ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
ಇದಲ್ಲದೇ ʼಮೊಬೈಲ್ ಬಿಡಿ, ಪುಸ್ತಕ ಹಿಡಿʼ ಸೇರಿದಂತೆ ಇನ್ನಷ್ಟು ವಿಶೇಷ ಯೋಜನೆಗಳನ್ನು ರೂಪಿಸಲಾಗಿದ್ದು, ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಅವುಗಳನ್ನು ಲೋಕಾರ್ಪಣೆಗೊಳಿಸಲಾಗುವುದು. ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ 19ಕೆ.ಪಿ.ಎಸ್. ಶಾಲೆಗಳ ಹಂಚಿಕೆಯಾಗಿದ್ದು, ಅದರ ಪ್ರಮಾಣ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಂಭವವಿದೆ ಎಂದರು.