
ಚಿತ್ರದುರ್ಗ,ಡಿ25: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಮುಂಜಾನೆ 3 ಗಂಟೆ ಸುಮಾರಿಗೆ ಬಸ್‌ಗೆ ಎದುರು ಬದಿಯಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡ್ ಕ್ರಾಸ್ ಮಾಡಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿ ಉರಿದು 10 ಮಂದಿ ಸಜೀವ ದಹನವಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.
ಲಾರಿ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. 32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಚಿತ್ರದುರ್ಗ ಹಾಗೂ ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದೆ.
ಇನ್ನು ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಘಟನೆಗೆ ಸಂತಾಪ ಸೂಚಿಸಿದ್ದಾರೆ.


.
.
