
ಬೆಂಗಳೂರು,ಡಿ. 29: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಜೇಷ್ಠತಾ ಪಟ್ಟಿಗೆ ಅನುಗುಣವಾಗಿ ಖಾಲಿ ಇರುವ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಬಡ್ತಿ ನೀಡಲು ರಾಜ್ಯಾದ್ಯಂತ ಏಕಕಾಲಕ್ಕೆ ಕೌನ್ಸಿಲಿಂಗ್ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪ್ರಕ್ರಿಯೆಗೆ ಮರು ಚಾಲನೆ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಸುಮಾರು 2000ಕ್ಕೂ ಹೆಚ್ಚು ಮುಖ್ಯ ಶಿಕ್ಷಕರಿಗೆ ಬಡ್ತಿ ಭಾಗ್ಯ ಸಿಗುವ ಸಾಧ್ಯತೆ ಇದೆ.
ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡುವ ಪ್ರಕ್ರಿಯೆಯನ್ನು ಜನವರಿ 1ರಿಂದ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಮುಖ್ಯ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದ ಬಳಿಕ ವಿವಿಧ ಹಂತದ ಪ್ರಕ್ರಿಯೆ ಪೂರ್ಣಗೊಳಿಸಿ ಕೌನ್ಸೆಲಿಂಗ್ ಮೂಲಕ ಬಡ್ತಿ ನೀಡಿ ಸ್ಥಳ ನಿಯೋಜನೆ ಮಾಡಲಾಗುವುದು. ಜ. 31 ರೊಳಗೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎನ್ನುವ ಮಾಹಿತಿ ಲಭಿಸಿದೆ.


.
.
