
ಬಳ್ಳಾರಿ,ಜ. 02: ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗುಂಡೇಟಿಗೆ ಬಲಿಯಾಗಿದ್ದಾರೆ.
ಈ ಸಂಬಂಧ ಶಾಸಕ ಗಾಲಿ ಜನಾರ್ದನ ರೆಡ್ಡಿ ,ಬಳ್ಳಾರಿ ನಗರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿಯ ತಂದೆ ಸೂರ್ಯನಾರಾಯಣ ರೆಡ್ಡಿ ಈ ದಾಳಿ ಮಾಡಿಸಿದ್ದಾರೆ. ಭರತ್ ರೆಡ್ಡಿ ಅಪ್ತ ಸತೀಶ್ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ರೂಪಿಸಲಾಗಿದೆ. ನನ್ನನ್ನು ಫಿನಿಶ್ ಮಾಡಲೆಂದೇ ಈ ದಾಳಿ ನಡೆಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ಮನೆ ಬಳಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಹಿನ್ನೆಲೆ ನಗರದ ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಶಾಸಕ ನಾರಾ ಭರತ ರಡ್ಡಿ ಭಾವಚಿತ್ರವಿದ್ದ ಬ್ಯಾನರ್ಗಳನ್ನು ಕಟ್ಟಲಾಗಿದೆ. ಅದರಂತೆ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಮನೆಯ ಎದುರಿನ ಜಾಗದಲ್ಲೂ ಕಟ್ಟಲಾಗಿತ್ತು. ಅದನ್ನು ಕಂಡ ಜನಾರ್ದನ ರೆಡ್ಡಿ ಆ ಬ್ಯಾನರ್ ತೆರವುಗೊಳಿಸಿದ್ದಾರೆ. ಅದು ಘರ್ಷಣೆಗೆ ಕಾರಣವಾಗಿದೆ.
ಬ್ಯಾನರ್ ತೆರವುಗೊಳಿಸಿದ ಸುದ್ದಿ ತಿಳಿದ ಭರತ್ ರೆಡ್ಡಿ ಬೆಂಬಲಿಗ ಎನ್ನಲಾದ ಸತೀಶ್ ರೆಡ್ಡಿ ಎಂಬುವರು ಜನಾರ್ದನ ರೆಡ್ಡಿ ಮನೆ ಎದುರು ರಸ್ತೆಯಲ್ಲಿ ಕುರ್ಚಿ ಹಾಕಿ ಕುಳಿತು ದರ್ಪದಿಂದ ಪುನಃ ಬ್ಯಾನರ್ ಕಟ್ಟಿಸಿದರು ಎನ್ನಲಾಗಿದೆ. ಗಲಾಟೆ ಮಾಡುತ್ತಿರುವುದನ್ನು ತಿಳಿದು ಸ್ಥಳಕ್ಕೆ ಬಂದ ಶ್ರೀರಾಮುಲು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಅವರ ಮಾತು ಕೇಳದ ಭರತ್ ರೆಡ್ಡಿ ಬೆಂಬಲಿಗರು ಕಲ್ಲುತೂರಾಟ ನಡೆಸಿದ್ದಾರೆ. ಅತ್ತ ಜನಾರ್ದನ ರಡ್ಡಿ ಬೆಂಬಲಿಗರೂ ಘರ್ಷಣೆಗೆ ಇಳಿದಿದ್ದಾರೆ. ಎರಡು ಬಣಗಳ ನಡುವೆ ಮೊದಲಿಗೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಈ ವಿಷಯ ತಿಳಿದು ಜನಾರ್ದನ ರೆಡ್ಡಿ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಸತೀಶ್ ರೆಡ್ಡಿ ಖಾಸಗಿ ಅಂಗರಕ್ಷಕರು ಎರಡು ಸುತ್ತು ಗುಂಡು ಹಾರಿಸಿದ್ದಾರೆ.
ಘಟನೆ ಬಗ್ಗೆ ಗೃಹಸಚಿವ ಡಾ. ಜಿ ಪರಮೇಶ್ವರ್ ಶಾಸಕ ಭರತ್ ರೆಡ್ಡಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪರಿಸ್ಥಿತಿ ಸುಧಾರಿಸದ ಹಿನ್ನೆಲೆ ಘಟನಾ ಸ್ಥಳದ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ.


.
.
