
ಕಾರ್ಕಳ, ಮಾ.12: ಕಾಂಗ್ರೆಸ್ ಸರ್ಕಾರದ ತಪ್ಪು ನೀತಿಗಳಿಂದ ಕೆಂಪು ಕಲ್ಲು,ಮರಳು ಪೂರೈಕೆಯಾಗದೇ ಬಡವರಿಗೆ ಸಮಸ್ಯೆಯಾಗಿದೆ. ಇದರಿಂದ ಕಟ್ಟಡ ಕಾರ್ಮಿಕರಿಗೆ ಕೆಲಸ ಇಲ್ಲದೇ ಜೀವನ ನಡೆಸುವುದು ಕಷ್ಟಕರವಾಗಿದೆ.
ಸ್ಟಾಂಪು ಹೆಚ್ಚಳ, ಗ್ಯಾರಂಟಿ ಹೆಸರಿನಲ್ಲಿ ಜನರ ಪಿಕ್ ಪಾಕೆಟ್, ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಒಂದೇ ಒಂದು ರೇಷನ್ ಕಾರ್ಡ್ ಕೊಟ್ಟಿಲ್ಲ. ಬದಲಾಗಿ ಸಾವಿರಾರು ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿ ಬದವರ ಅನ್ನಕ್ಕೆ ಕಲ್ಲು ಹಾಕಿದೆ ಇಂತಹ ಜನ ವಿರೋಧಿ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಮಾ14 ರಂದು ಗ್ರಾಮ ಮಟ್ಟದಲ್ಲಿ ಹಾಗೂ ಪುರಸಭೆ,ನಗರ ಪಾಲಿಕೆ ಮಟ್ಟದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದೆಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಹೇಳಿದರು.
ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ,ಡೀಮ್ಡ್ ಅರಣ್ಯ ವಿರಹಿತವಾದರೂ ಬಡವರಿಗೆ ನಿವೇಶನ ನೀಡದೇ ಅರ್ಜಿದಾರರ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸಲಾಗುತ್ತಿದೆ.ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯಾವುದೇ ಮಹತ್ವ ನೀಡದಿರುವುದು, ಅಭಿವೃದ್ಧಿಗೆ ಅಗತ್ಯ ಅನುದಾನ ನೀಡದಿರುವುದು ಹಾಗೂ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದು ಹೇಳಿದರು.
ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆಗಳಲ್ಲಿ ಗೊಂದಲ ಉಂಟಾಗಿದೆ. ಅಘೋಷಿತ ಲೋಡ್ ಶೆಡ್ಡಿಂಗ್ ಹಾಗೂ ನಿರಂತರ ವಿದ್ಯುತ್ ದರ ಏರಿಕೆಯಿಂದ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ಜೊತೆಗೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರಾಜ್ಯ ಬಜೆಟ್ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದರು. ಗ್ರಾಮ ಪಂಚಾಯತ್ನಿಂದ ವಿಧಾನಸೌಧದವರೆಗೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಹೇಳಿದರು.
ಜವಳಿ ಪಾರ್ಕ್ ಕುರಿತು ಮಾತನಾಡಿದ ಅವರು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ರೂಪಿಸಲಾಗಿದ್ದರಿಂದ ಎರಡು ಬಾರಿ ಟೆಂಡರ್ ಕರೆಯಲಾಗಿದ್ದರೂ ಟೆಂಡರ್ದಾರರು ಮುಂದೆ ಬಂದಿಲ್ಲ. ಈ ಬಗ್ಗೆ ಶಾಸಕ ಸುನೀಲ್ ಕುಮಾರ್ ಈಗಾಗಲೇ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ರಾಜ್ಯ ಸರ್ಕಾರವೇ ನೇರವಾಗಿ ಜವಳಿ ಪಾರ್ಕ್ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ಉಪಸ್ಥಿತರಿದ್ದರು.


.
.
.
.
.
.
.
.
.
.
