
ಕಾರ್ಕಳ, ಮಾ 12: ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದಿಂದ ಆಯೋಜಿಸಲಾದ “ಇಂಟರ್ ಕಾಲೇಜಿಯೇಟ್ ಅಥ್ಲೆಟಿಕ್ ಚಾಂಪಿಯನ್ಶಿಪ್ – 2026” ಕ್ರೀಡಾಕೂಟಕ್ಕೆ ಬುಧವಾರ ನಿಟ್ಟೆಯ ಬಿ.ಸಿ. ಅಳ್ವ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಕ್ರೀಡಾಕೂಟ ಉದ್ಘಾಟಿಸಿದರು. ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಶಿಸ್ತು, ನಾಯಕತ್ವ ಹಾಗೂ ತಂಡಭಾವವನ್ನು ಬೆಳೆಸುತ್ತದೆ ಎಂದು ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದರು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಯಲ್ಲಿಯೂ ಸಮಾನ ಆಸಕ್ತಿ ತೋರಿಸಿ ಸಾಧನೆ ಮಾಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಆಫ್-ಕ್ಯಾಂಪಸ್ ಕೇಂದ್ರದ ನಿರ್ವಹಣೆ ಹಾಗೂ ಅಭಿವೃದ್ಧಿ ವಿಭಾಗದ ನಿರ್ದೇಶಕ ಎ. ಯೋಗೀಶ್ ಹೆಗ್ಡೆ ಅವರು ಗೌರವ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಪ್ರಮುಖ ವೇದಿಕೆಗಳಾಗಿವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ಎಂಎಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ವಹಿಸಿದ್ದರು. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಅವರ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಗಣೇಶ್ ಪೂಜಾರಿ ಸ್ವಾಗತಿಸಿದರು. ನಿಟ್ಟೆ ಎಜುಕೇಶನ್ ಟ್ರಸ್ಟ್ನ ಕ್ರೀಡಾ ಆಡಳಿತಾಧಿಕಾರಿ ಶ್ರೀ ಶ್ಯಾಮ್ ಸುಂದರ್ ಎಂ. ವಂದಿಸಿದರು.
ಉದ್ಘಾಟನಾ ಕಾರ್ಯಕ್ರಮದ ನಂತರ ವಿವಿಧ ಅಥ್ಲೆಟಿಕ್ ಸ್ಪರ್ಧೆಗಳು ಪ್ರಾರಂಭವಾಗಿ ವಿವಿಧ ಕಾಲೇಜುಗಳಿಂದ ಬಂದಿರುವ ಕ್ರೀಡಾಪಟುಗಳು ಉತ್ಸಾಹದಿಂದ ಪಾಲ್ಗೊಂಡರು.


.
.
.
.
.
.
.
.
.
.
