
ಬೆಂಗಳೂರು, ಮೇ.23: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳಲ್ಲಿ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ, 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ, ಖಾಲಿ ಇರುವ ಹುದ್ದೆಗಳಿಗೆ ತಕ್ಷಣವೇ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಹಸಿರು ನಿಶಾನೆ ತೋರಿಸಿದೆ. ಮಂಜೂರಾಗಿರುವ ಒಟ್ಟು 51 ಸಾವಿರ ಹುದ್ದೆಗಳಲ್ಲಿ ಪ್ರಾಥಮಿಕ ಶಾಲೆಗಳಿಗೆ ಸಿಂಹಪಾಲು ಸಿಕ್ಕಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 11 ಸಾವಿರ ಶಿಕ್ಷಕರು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.
ಜೂನ್ 1 ರಂದು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿರುವ “ಕರ್ನಾಟಕ ಪಬ್ಲಿಕ್ ಸ್ಕೂಲ್” ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ರಾಜ್ಯಾದ್ಯಂತ ಒಟ್ಟು 1,000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಆರಂಭಿಸಲಾಗುತ್ತಿದ್ದು, ಇವುಗಳಲ್ಲಿ ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು ಸೇರಿವೆ. ಪ್ರತಿ ಕೆಪಿಎಸ್ ಸಂಸ್ಥೆಯ ಅಭಿವೃದ್ಧಿಗೆ ತಲಾ 3.5 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
