
ಬೆಂಗಳೂರು,ಜು.12: ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅನಧಿಕೃತ ಶೆಡ್ಗಳ ತೆರವು ಕಾರ್ಯಾಚರಣೆ ವೇಳೆ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪಶ್ಚಿಮ ಬಂಗಾಳ ಮೂಲದ ಆರೋಪಿ ಮಹಿಳೆ ಸರ್ಬಾನು ಖಾತುನ್ (25) ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾಳೆ. ಈಕೆ ಪ್ರಸ್ತುತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ನಿವಾಸಿಯಾಗಿದ್ದು,ಮಹಿಳೆಗೆ ಇಬ್ಬರು ಅಪ್ರಾಪ್ತ ಮಕ್ಕಳಿದ್ದು, ಅವರ ಪಾಲನೆ ಮತ್ತು ಪೋಷಣೆ ಮಾಡಲು ತಾಯಿಯ ಅಗತ್ಯವಿದೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಆರೋಪಿ ಸರ್ಬಾನು ಖಾತುನ್ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಏಕಸದಸ್ಯ ಪೀಠವು ಮುಕ್ತವಾಗಿ ತಿರುಗಾಡಲು ಬಿಡದೆ ಕಠಿಣ ಷರತ್ತುಗಳನ್ನು ವಿಧಿಸಿ 1 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಒಬ್ಬ ಸ್ಥಳೀಯ ಶ್ಯೂರಿಟಿಯನ್ನು ಒದಗಿಸಬೇಕು ಎಂದು ಸೂಚಿಸಿ ಜಾಮೀನು ಮಂಜೂರುಗೊಳಿಸಿ ಮಹತ್ವದ ಆದೇಶವನ್ನು ಹೊರಡಿಸಿದೆ.ಇದರೊಂದಿಗೆ ಸಾಕ್ಷ್ಯ ನಾಶಪಡಿಸಲು ಯತ್ನಿಸಬಾರದು, ಮುಂದಿನ ದಿನಗಳಲ್ಲಿ ಇಂತಹ ಯಾವುದೇ ರಾಷ್ಟ್ರವಿರೋಧಿ ಅಥವಾ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಮತ್ತು ಪೊಲೀಸ್ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶಿಸಿದೆ.
ಏನಿದು ಪ್ರಕರಣ:
ಕಳೆದ ಜನವರಿ 11 ರಂದು ಅಧಿಕಾರಿಗಳು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿದ್ದ ಅನಧಿಕೃತ ಶೆಡ್ಗಳನ್ನು ತೆರವುಗೊಳಿಸುತ್ತಿದ್ದರು. ಈ ಕಾರ್ಯಾಚರಣೆಯ ವೇಳೆ ಸ್ಥಳದಲ್ಲಿದ್ದ ಕೆಲವರು ‘ಜೈ ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುತ್ತಾ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿ ಸರ್ಬಾನು ಖಾತುನ್ ಇದರಿಂದ ಆಕ್ರೋಶಗೊಂಡು ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಳು.ಆಕೆ ‘ಜೈ ಬಾಂಗ್ಲಾ’ ಎಂದು ಕೂಗಿದ್ದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ರಾಷ್ಟ್ರೀಯ ಏಕತೆಗೆ ಧಕ್ಕೆ ತಂದ ಆರೋಪದಡಿ ಹೆಬ್ಬಗೋಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಜನವರಿ 12 ರಂದು ಆಕೆಯನ್ನು ಬಂಧಿಸಿ ಜೈಲಿಗಟ್ಟಿದ್ದರು. ಸದ್ಯ ಈಗ ಹೈಕೋರ್ಟ್ ಆಕೆಗೆ ಷರತ್ತುಬದ್ಧ ಜಾಮೀನು ನೀಡಿದೆ.

.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
