
ಕಾರ್ಕಳ,ಆ. 08: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತುರ್ತು ಅಗತ್ಯವಿರುವ ಕಾರ್ಕಳ ತಾಲೂಕು ಆಸ್ಪತ್ರೆಯ ಅಭಿವೃದ್ಧಿ ಹಾಗೂ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆಗಳು, ಪುರಸಭಾ ವ್ಯಾಪ್ತಿಯ ರಸ್ತೆಗಳು ಮತ್ತು ಶಾಲಾ ಕಾಲೇಜು ಕಟ್ಟಡಗಳ ಅಭಿವೃದ್ಧಿಗೆ ತುರ್ತು ಅನುದಾನ ಒದಗಿಸುವಂತೆ ಮಾಜಿ ಸಚಿವ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಗೆ ಮನವಿ ಸಲ್ಲಿಸಿದರು.
ಕಾರ್ಕಳ ತಾಲೂಕು ಆಸ್ಪತ್ರೆಯು ಕಾರ್ಕಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಸಾವಿರಾರು ಜನರಿಗೆ ಪ್ರಮುಖ ಆರೋಗ್ಯ ಸೇವಾ ಕೇಂದ್ರವಾಗಿದೆ. ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುತ್ತಿದ್ದು, ತಜ್ಞ ವೈದ್ಯರ ಕೊರತೆ ಹಾಗೂ ಕೆಲವು ಅಗತ್ಯ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ನೇಮಕ, ಅಗತ್ಯ ವೈದ್ಯಕೀಯ ಉಪಕರಣಗಳ ವ್ಯವಸ್ಥೆ, ಸ್ಕ್ಯಾನಿಂಗ್ ಸೇರಿದಂತೆ ತುರ್ತು ಆರೋಗ್ಯ ಸೇವೆಗಳನ್ನು ಬಲಪಡಿಸುವುದು ಅಗತ್ಯವಾಗಿದೆ. ವಿಶೇಷವಾಗಿ ಗರ್ಭಿಣಿಯರು ಹಾಗೂ ತಾಯಿ-ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದ ಪರೀಕ್ಷೆಗಳು ಮತ್ತು ಚಿಕಿತ್ಸೆಗಳು ಸ್ಥಳೀಯವಾಗಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಕಾರ್ಕಳ ತಾಲೂಕು ಆಸ್ಪತ್ರೆಯನ್ನು ಅಗತ್ಯ ತಜ್ಞ ವೈದ್ಯರು ಮತ್ತು ಮೂಲಭೂತ ಸೌಕರ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವಿ. ಸುನಿಲ್ ಕುಮಾರ್ ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳಿಂದ 100 ಹಾಸಿಗೆಗಳ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ, ಹೆಬ್ರಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಉತ್ತಮ ಆರೋಗ್ಯ ಸೇವೆ ದೊರೆಯುವ ನಿಟ್ಟಿನಲ್ಲಿ ಅಗತ್ಯ ತಜ್ಞ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಶಾಸಕ ವಿ. ಸುನಿಲ್ ಕುಮಾರ್ ಅವರು ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಮಾಡಿದ್ದಾರೆ.
ಅತಿಯಾದ ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಸೇತುವೆಗಳು, ಗ್ರಾಮೀಣ ಸಂಪರ್ಕ ರಸ್ತೆಗಳು ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಹಲವು ಕಡೆಗಳಲ್ಲಿ ಮನೆಗಳು ಹಾಗೂ ಕೃಷಿ ಪ್ರದೇಶಗಳಿಗೂ ಹಾನಿಯಾಗಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಸುಗಮ ಸುರಕ್ಷಿತ ಸಂಚಾರಕ್ಕೆ ತುಂಬಾ ತೊಂದರೆ ಆಗುತ್ತಿದ್ದು ಹಾನಿಗೊಳಗಾದ ರಸ್ತೆ ಮತ್ತು ಸೇತುವೆಗಳನ್ನು ಜೊತೆಗ ಶಾಲಾ ಕಾಲೇಜು ಕಟ್ಟಡಗಳನ್ನು ತುರ್ತಾಗಿ ದುರಸ್ತಿ, ಪುನರ್‌ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡುವುದು ಅತ್ಯವಶ್ಯಕವಾಗಿದೆ.
ಈ ಹಿನ್ನೆಲೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಪ್ರಾಕೃತಿಕ ವಿಕೋಪ ಪೀಡಿತ ಪ್ರದೇಶಗಳಿಗೆ ವಿಶೇಷ ಅನುದಾನ ಹಾಗೂ ತುರ್ತು ಪರಿಹಾರ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ವಿ. ಸುನಿಲ್ ಕುಮಾರ್ ಅವರು ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು.




.
.
.
.
.
.
.
.
.
.
.
.
.
.
.
.
.
.
.
.
