

ಬೆಂಗಳೂರು,ನ.19: ರಾಜ್ಯದಾದ್ಯಂತ ವಿವಿಧ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ನಾಗರಿಕ ಸೇವಾ ತಕ್ಷಣದಿಂದ ಜಾರಿಗೆ ಬರುವಂತೆ “ಪ್ರಜಾ ಸೇವಾ ಕೇಂದ್ರ” ಎಂದು ಮರುನಾಮಕರಣ ಮಾಡಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಪ್ರಜಾಸೇವಾ ಇಲಾಖೆಯ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (EDCS) ಅಡಿಯಲ್ಲಿ . ಬೆಂಗಳೂರು ನಗರದಲ್ಲಿ ‘ಬೆಂಗಳೂರು ಒನ್, ಇತರೆ ನಗರ ಹಾಗೂ ಪಟ್ಟಣಗಳಲ್ಲಿ ‘ಕರ್ನಾಟಕ ಒನ್ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ‘ಗ್ರಾಮ ಒನ್’ ಎಂಬ ಹೆಸರುಗಳಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲಾಗುತ್ತಿತ್ತು. ರಾಜ್ಯಾದ್ಯಂತ ಈ ಕೇಂದ್ರಗಳು ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುತ್ತಿದ್ದ ಹಿನ್ನೆಲೆಯಲ್ಲಿ ಸೇವೆಗಳ ವಿತರಣೆಯಲ್ಲಿ ಏಕರೂಪತೆ ತರುವ ಉದ್ದೇಶದಿಂದ ಮುಖ್ಯಮಂತ್ರಿ ಅವರ ಸೂಚನೆಯ ಮೇರೆಗೆ ಮರುನಾಮಕರಣ ಮಾಡಲಾಗಿದೆ.
ನವೆಂಬರ್ 18, 2026ರಿಂದ ರಾಜ್ಯದ ಎಲ್ಲ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳನ್ನು ‘ಪ್ರಜಾ ಸೇವಾ ಕೇಂದ್ರ’ ಎಂದು ಕರೆಯಲಾಗುತ್ತದೆ. ಇನ್ನು ಮುಂದೆ ಅಧಿಕೃತ ಪತ್ರ ವ್ಯವಹಾರಗಳು, ನಾಮಫಲಕಗಳು, ವೆಬ್ ಪೋರ್ಟಲ್ಗಳು, ತಂತ್ರಾಂಶಗಳು, ರಸೀದಿಗಳು ಹಾಗೂ ಪ್ರಚಾರ ಸಾಮಗ್ರಿಗಳಲ್ಲಿ ‘ಪ್ರಜಾ ಸೇವಾ ಕೇಂದ್ರ’ ಎಂಬ ಹೆಸರನ್ನೇ ಬಳಸುವಂತೆ ಸೂಚಿಸಲಾಗಿದೆ.
ರಾಜ್ಯದ ಎಲ್ಲ ಪ್ರಜಾ ಸೇವಾ ಕೇಂದ್ರಗಳಿಗೆ ಏಕರೂಪದ ಬ್ಯಾಂಡಿಂಗ್, ನಾಮಫಲಕದ ವಿನ್ಯಾಸ, ಲಾಂಛನ ಹಾಗೂ ಬಣ್ಣದ ವಿನ್ಯಾಸ ರೂಪಿಸಿ ಸರ್ಕಾರದಿಂದ ಅನುಮೋದನೆ ಪಡೆಯುವಂತೆ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ನಿರ್ದೇಶಕರಿಗೆ ಸೂಚಿಸಲಾಗಿದೆ.
ಕೇಂದ್ರಗಳ ನಿರ್ವಾಹಕರು ಹಾಗೂ ಫ್ರಾಂಚೈಸಿಗಳೊಂದಿಗಿನ ಒಪ್ಪಂದಗಳಲ್ಲಿಯೂ ಹೊಸ ಹೆಸರನ್ನು ಅಳವಡಿಸಬೇಕು. ಈ ಆದೇಶವನ್ನು ರಾಜ್ಯಾದ್ಯಂತ ಅತ್ಯಂತ ಆದ್ಯತೆಯ ಮೇರೆಗೆ ಜಾರಿಗೊಳಿಸುವಂತೆ ಪ್ರಜಾಸೇವಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಆದೇಶದಲ್ಲಿ ತಿಳಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
