

ಮಂಗಳೂರು,ನ.22: ದಕ್ಷಿಣ ಕನ್ನಡ ಜಿಲ್ಲಾಡಳಿತವು ಬಿಡಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಅಂಗಡಿ ಮತ್ತು ಹೋಟೆಲ್ಗಳಲ್ಲಿ ‘ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಬಿಡಿಯಾಗಿ ಮಾರಾಟ ಮಾಡುವಂತಿಲ್ಲ’ ಎಂಬ ಎಚ್ಚರಿಕೆ ಫಲಕ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿದೆ. ನಿಯಮ ಉಲ್ಲಂಘಿಸುವ ವ್ಯಾಪಾರಿಗಳ ಪರವಾನಗಿಯನ್ನೇ ರದ್ದುಗೊಳಿಸುವ ಎಚ್ಚರಿಕೆಯನ್ನೂ ಅಧಿಕಾರಿಗಳು ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ರಾಜು ಈ ಮಹತ್ವದ ಸೂಚನೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಹೊಸದಾಗಿ ವ್ಯಾಪಾರ ಪರವಾನಗಿ ನೀಡುವಾಗ ಮತ್ತು ನವೀಕರಿಸುವಾಗ ಈ ಷರತ್ತನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ನಿರ್ದೇಶಿಸಿದ್ದಾರೆ.
ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹೋಟೆಲ್, ಕೆಫೆಗಳು ಮತ್ತು ಬಿಡಿ ಸಿಗರೇಟ್ ಮಾರಾಟ ಮಾಡುವ ಅಂಗಡಿಗಳ ಮೇಲೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಜಂಟಿ ದಾಳಿ ನಡೆಸಲಿವೆ. ಕಾಯ್ದೆ ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜೊತೆಗೆ ಪರವಾನಗಿ ರದ್ದುಪಡಿಸುವ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಾಲಾ-ಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತರಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ ತಿಳಿಸಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಮಾತನಾಡಿ, ಅಕ್ರಮ ತಂಬಾಕು ಮಾರಾಟ ಮತ್ತು ಸಾರ್ವಜನಿಕ ಧೂಮಪಾನದ ವಿರುದ್ಧ ಈಗಾಗಲೇ ದಂಡ ವಿಧಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದಿದ್ದಾರೆ. ಇದೇ ವೇಳೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಅವರು ಶಾಲಾ-ಕಾಲೇಜುಗಳಲ್ಲಿ 60 ದಿನಗಳ ಕಾಲ ನಡೆಯಲಿರುವ ತಂಬಾಕು ಮುಕ್ತ ಯುವ ಅಭಿಯಾನ 4.0 ಕ್ಕೆ ಚಾಲನೆ ನೀಡಿದ್ದಾರೆ. ಯುವಜನತೆಯನ್ನು ತಂಬಾಕು ವ್ಯಸನದಿಂದ ದೂರವಿಡುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
