ಕಾರ್ಕಳ: ಕಾಯಿಲೆಯಿಂದ ಬಳಲುತ್ತಿದ್ದ ಅಜೆಕಾರಿನ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸಾರ್ಜ್ ಆಗಿ ಮನೆಗೆ ಬಂದ ದಿನವೇ ತಡರಾತ್ರಿ ಏಕಾಎಕಿ ಮೃತಪಟ್ಟ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಅವರ ಸಾವಿನ ಸುತ್ತ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ.
ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಬಾಲಕೃಷ್ಣ ಪೂಜಾರಿ ಏಕಾಎಕಿ ಮೃತಪಟ್ಟಿರುವುದು ಹಲವು ಪ್ರಶ್ನೆಗಳಿಗೆ ಎಡೆಮಾಡಿದೆ. ಬಾಲಕೃಷ್ಣ ಸಾವಿನ ಕುರಿತು ತನಿಖೆ ನಡೆಸುವಂತೆ ತಂದೆ ಸಂಜೀವ ಪೂಜಾರಿ ಅಜೆಕಾರು ಪೊಲೀಸರಿಗೆ ದೂರು ನೀಡಿದ್ದು ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವದ ಪೋಸ್ಟ್ ಮಾರ್ಟಮ್ ಹಾಗೂ ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಿದ್ದಾರೆ.
ಬಾಲಕೃಷ್ಣ ಸಾವಿನ ಕುರಿತು ಅನುಮಾನ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಜೆಕಾರು ಪೊಲೀಸರು ತನಿಖೆ ನಡೆಸುತ್ತಿದ್ದು, ಆತನ ಸಾವಿನ ನಿಖರ ಕಾರಣ ಏನಿರಬಹುದೆಂದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ.