ಬೆಂಗಳೂರು: ಬೆಂಗಳೂರಿನಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಮೂವರು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ತಡರಾತ್ರಿ ಬೆಂಗಳೂರಿನ ಎಂಎಸ್ ಪಾಳ್ಯದಲ್ಲಿರುವ ಸಂತ್ರಸ್ತರಾದ ವಿನಾಯಕ್, ರಾಹುಲ್ ಮತ್ತು ಪವನ್ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ರಾಮನವಮಿ ಮುಗಿಸಿಕೊಂಡು ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಸಂತ್ರಸ್ತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎಂಎಸ್ ಪಾಳ್ಯ ಬಳಿ ಅನ್ಯ ಸಮುದಾಯದ ಯುವಕರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.
‘ನಾವು ಘಟನೆಯನ್ನು ಖಂಡಿಸುತ್ತೇವೆ. ದೇಶಾದ್ಯಂತ ರಾಮ ನವಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಹೀಗಾಗಿ, ನಮ್ಮ ಯುವಕರು ವಿವಿಧ ರೀತಿಯಲ್ಲಿ ಹಬ್ಬವನ್ನು ಆಚರಿಸುತ್ತಾರೆ. ಅವರು ಪೂಜೆ ಮಾಡುತ್ತಾರೆ ಮತ್ತು ಮೆರವಣಿಗೆ ಮಾಡುತ್ತಾರೆ ಮತ್ತು ಅವರು ಸ್ವಾಭಾವಿಕವಾಗಿ ಕೇಸರಿ ಧ್ವಜಗಳನ್ನು ಹಿಡಿದುಕೊಳ್ಳುತ್ತಾರೆ. ಈ ವೇಳೆ ಅವರು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿಲ್ಲ’ ಎಂದು ಹೇಳಿದರು.
ಐದರಿಂದ ಆರು ಜನರ ಗುಂಪು ದಾಳಿ ನಡೆಸಿದೆ ಎಂದು ಸಂತ್ರಸ್ತರು ಹೇಳುತ್ತಿದ್ದಾರೆ. ಅವರೆಲ್ಲರನ್ನೂ ಬಂಧಿಸುವಂತೆ ನಾನು ಪೊಲೀಸರನ್ನು ಒತ್ತಾಯಿಸುತ್ತೇನೆ. ಈ ಘಟನೆಯಲ್ಲಿ ಕಾಂಗ್ರೆಸ್ ನಾಯಕರ ಕೈವಾಡವಿದ್ದರೆ ನಾವು ಸುಮ್ಮನೆ ಕೂರುವುದಿಲ್ಲ. ತಕ್ಷಣ ಪೊಲೀಸ್ ಕಮಿಷನರ್ ಮತ್ತು ಡಿಸಿಪಿ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು.
ಪ್ರತಿಪಕ್ಷದ ನಾಯಕ ಆರ್ ಅಶೋಕ ಮಾತನಾಡಿ, ‘ಕಾಂಗ್ರೆಸ್ ಸರಕಾರದ ತುಷ್ಟೀಕರಣದ ಫಲವಾಗಿ ಈ ಘಟನೆ ನಡೆದಿದೆ. ಲೋಕಸಭೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಈಮಧ್ಯೆ, ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಅಪ್ತಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ರಾಜ್ಯ ರಾಜಧಾನಿಯ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ (ಈಶಾನ್ಯ) ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ. ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ಆರೋಪಿಗಳು ಕಾರನ್ನು ಅಡ್ಡಗಟ್ಟಿ ಗಲಾಟೆ ಮಾಡಿದ್ದಾರೆ. ಕಾರಿನಲ್ಲಿದ್ದ ಯುವಕರ ಮೇಲೂ ಹಲ್ಲೆ ನಡೆಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಯುವಕರ ಮೇಲೆ ಹಲ್ಲೆ ನಡೆಸಿದ ಇತರ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.