Share this news

ಬೀದರ್,ಆ.17: ಗಣೇಶ ಹಬ್ಬವನ್ನು ಪರಿಸರ ಸ್ನೇಹಿ ಮಣ್ಣಿನ ಗಣಪತಿಯಿಂದ ಆಚರಿಸುವಂತೆ ಸರ್ಕಾರ ಮನವಿ ಮಾಡಿದೆ. ಯಾರೂ ಕೂಡ ಪಿಓಪಿ ಗಣೇಶ ಪೂಜಿಸದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಜನರಲ್ಲಿ ಮನವಿ ಮಾಡಿದ್ದು, ಪಿಓಪಿ ಗಣೇಶನನ್ನು ಪೂಜಿಸುವವರು ಸಾರ್ವಜನಿಕ ನದಿ,ಕೆರೆಗಳು ಹಾಗೂ ಜಲಮೂಲಗಳಲ್ಲಿ ವಿಸರ್ಜನೆ ಮಾಡುವಂತಿಲ್ಲ ಎಂದು ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ನೀರಲ್ಲಿ ಕರಗದ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ವಿಷಕಾರಿಯಾದ ಭಾರಲೋಹಯುಕ್ತ ರಾಸಾಯನಿಕ ಬಣ್ಣ ಲೇಪಿತ -ಪಿಓಪಿ ಮೂರ್ತಿಗಳ ಸಂಖ್ಯೆ ಹೆಚ್ಚಾಗಿದ್ದು, ಇದರ ವಿಸರ್ಜನೆಯಿಂದ ಜಲಚರಗಳು, ಪಶುಪಕ್ಷಿಗಳ ಸಾವಿಗೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ)ಕಾಯಿದೆ 1974ರ ಕಲಂ 33(ಎ) ಅಡಿಯಲ್ಲಿ ರಾಜ್ಯದ ನದಿ, ಸರೋವರ, ಕೆರೆ, ಕಟ್ಟೆ, ಬಾವಿ ಸೇರಿದಂತೆ ಯಾವುದೇ ಜಲ ಮೂಲದಲ್ಲಿ ಪಿಓಪಿ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ. ಪ್ರಜ್ಞಾವಂತ, ಜವಾಬ್ದಾರಿಯುತ ನಾಗರಿಕರು, ಧಾರ್ಮಿಕರು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಮಾತ್ರವೇ ಪೂಜಿಸಿ ಪರಿಸರ ಉಳಿಸುವಂತೆ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ಹಬ್ಬದ ಸಂಭ್ರಮದಲ್ಲಿ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವು ಉಂಟು ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಆದರೆ ಪರಿಸರಕ್ಕೆ ಮಾರಕವಾದ ಪಿಓಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆ ನಿಷೇಧಿಸಿ 2023ರ ಸೆ.15ರಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ, ಇತ್ತೀಚೆಗೆ ರಾಜ್ಯ ಹೈಕೋರ್ಟ್ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿಯಾದ ಮಣ್ಣಿನ ಮೂರ್ತಿಗಳನ್ನು ಪೂಜಿಸಿ ಪರಿಸರ ಉಳಿಸುವಂತೆ ಈಶ್ವರ ಖಂಡ್ರೆ ಕೋರಿದ್ದಾರೆ.

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *