ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಸರ್ಕಾರದ ವಿರುದ್ದ ‘ಪಂಚ’ ಅಸ್ತ್ರ ಹೂಡಲು ಬಿಜೆಪಿ ನಾಯಕರು ಸಜ್ಜಾಗಿದ್ದು, ಅತ್ತ ಸರ್ಕಾರ ಕೂಡ ಪ್ರತ್ಯಸ್ತ್ರ ತಯಾರು ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಬಾಣಂತಿಯರ ಸಾವು, ಶಿಶುಗಳ ಸಾವು, ವಕ್ಫ್ ವಿವಾದ, ಮುಡಾ ಅಕ್ರಮ, ವಾಲ್ಮೀಕಿ ನಿಗಮ ಹಗರಣ, ಅಬಕಾರಿ ಇಲಾಖೆ ಭ್ರಷ್ಟಾಚಾರ, ಹೀಗೆ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಾಲು ಸಾಲು ಬಾಣಗಳು ಬಿಜೆಪಿಯ ಬತ್ತಳಿಕೆಯಲ್ಲಿವೆ. ಆದರೆ, ಬಿಜೆಪಿಗೆ ಬಿಸಿ ತುಪ್ಪವಾಗಿರುವ ಯತ್ನಾಳ್, ಸದನದಲ್ಲಿ ಯಾವ ರೀತಿ ಸ್ಪಂದಿಸುತ್ತಾರೆ ಎಂಬುದು ಕಮಲ ಪಡೆಗೆ ಆತಂಕ ತಂದೊಡ್ಡಿದೆ.
ಬಿಜೆಪಿ ಸಿದ್ಧವಾಗಿಟ್ಟುಕೊಂಡಿರುವ ಬಾಣಗಳಿಗೆ ಕಾಂಗ್ರೆಸ್ ನಾಯಕರು ಕೊರೊನಾ ಹಗರಣದ ಪ್ರತ್ಯಸ್ತ್ರ ಸಿದ್ಧ ಮಾಡಿಟ್ಟುಕೊಂಡಿದ್ದಾರೆ. ಅಷ್ಟೇ ಅಲ್ಲ, ವಕ್ಫ್ ವಿಚಾರ ಮುಂದಿಟ್ಟರೆ, ಯತ್ನಾಳ್ ಪ್ರತ್ಯೇಕ ಹೋರಾಟ ಪ್ರಸ್ತಾಪಿಸಿ ತಿವಿಯುವ ಸಾಧ್ಯತೆ ಇದೆ.
ಬಳ್ಳಾರಿಯಲ್ಲಿ ಐವರು ಬಾಣಂತಿಯರ ಸಾವನ್ನು ಪ್ರಸ್ತಾಪಿಸಲು ಬಿಜೆಪಿ ಸಜ್ಜಾಗಿದೆ. ಮೃತರ ಕುಟುಂಬದವರಿಗೆ 1 ಕೋಟಿ ರೂ. ಪರಿಹಾರದ ಜೊತೆಗೆ ಲೋಕಾಯುಕ್ತ ತನಿಖೆಗೆ ಆಗ್ರಹಿಸಿದೆ.ರೈತರ ಜಮೀನಿನಲ್ಲಿ ವಕ್ಫ್ ಹೆಸರು ಉಲ್ಲೇಖ ವಿಚಾರ ಬಿಜೆಪಿ ನಾಯಕರಿಗೆ ಮತ್ತೊಂದು ಪ್ರಮುಖ ಅಸ್ತ್ರವಾಗಿದೆ. ಇದೇ ವಿಚಾರಕ್ಕೆ ಬಿಜೆಪಿ ನಾಯಕರು ಪ್ರತಿಭಟಿಸಿದ್ದಾರೆ. ಯತ್ನಾಳ್ ಬಣ, ವಿಜಯೇಂದ್ರ ಟೀಂ, ಆರ್.ಅಶೋಕ್ ಸೇರಿ ಬಿಜೆಪಿ ನಾಯಕರು ರೈತರ ಬಳಿ ವಕ್ಫ್ ವಿಚಾರವಾಗಿ ಮಾಹಿತಿ ಸಂಗ್ರಹಿಸಿದ್ದು, ಇದನ್ನ ಸದನದ ಮುಂದಿಡಲಿದ್ದಾರೆ.ಇದಿಷ್ಟೇ ಅಲ್ಲ, ವಾಲ್ಮೀಕಿ ನಿಗಮ, ಮುಡಾ ಅಕ್ರಮ ವಿಷಯವನ್ನು ಕೂಡ ಬಿಜೆಪಿ ಸದನದಲ್ಲಿ ಅಸ್ತ್ರವನ್ನಾಗಿ ಬಳಸಿಕೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುವ ಸಾಧ್ಯತೆ ಇದೆ.