Share this news

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ(79) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿದ್ದ ವಸಂತ ಬಂಗೇರ ಅವರು 1946ರ ಜ.15 ರಂದು ಜನಿಸಿದ್ದರು. ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲಿನಲ್ಲಿ ತಮ್ಮ ಎಸೆಸ್ಸೆಲ್ಸಿ ವ್ಯಾಸಂಗ ಮುಗಿಸಿದ ಬಳಿಕ ಮುಲ್ಕಿ ಹಾಗೂ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು. 1972ರಲ್ಲೇ ಚುನಾವಣಾ ರಾಜಕೀಯಕ್ಕೆ ಧುಮುಕಿದ್ದ ವಸಂತ ಬಂಗೇರ, ಕುವೆಟ್ಟು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ, ಸದಸ್ಯರಾಗಿ, ನಂತರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

1983ರಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಕಣಕ್ಕೆ ಇಳಿದರು. ಪ್ರಥಮ ಬಾರಿಗೆ ವಿಧಾನಸಭೆಯ ಸದಸ್ಯರಾಗಿಯೂ ಪ್ರವೇಶ ಮಾಡಿದ್ದರು. 1989ರಲ್ಲಿ ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದ ಅವರು ಸೋಲು ಕಂಡಿದ್ದರು. 1994ರಲ್ಲಿ ಜೆಡಿಎಸ್ ನಿಂದ ಮತ್ತೆ ಸ್ಪರ್ಧಿಸಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಇದೇ ಅವಧಿಯಲ್ಲಿ ವಿಧಾನಸಭೆಯ ಮುಖ್ಯ ಸಚೇತಕರಾಗಿಯೂ ಸೇವೆ ಸಲ್ಲಿಸಿದ್ದರು.

2008ರಲ್ಲಿ ಜೆಡಿಎಸ್ ತೊರೆದು, ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಅವರು, ನಾಲ್ಕನೇ ಅವಧಿಗೆ ಬೆಳ್ತಂಗಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2013ರಲ್ಲಿ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿ, ಸಿದ್ಧರಾಮಯ್ಯ ಸರ್ಕಾರದಲ್ಲಿ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ.

ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂದು ವರ್ಗದವರನ್ನು ಅಗಲಿದ್ದಾರೆ.

 

 

 

 

                        

                          

Leave a Reply

Your email address will not be published. Required fields are marked *