ಬೆಂಗಳೂರಿನ ಎಂ,ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೂನ್ 05 ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಪ್ರಮುಖವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ , ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.
ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಮತ್ತೆ ವಿಶೇಷ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ, ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರು ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್ಸಿಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿಸಿದರು.
ಮೃತಪಟ್ಟವರ ಕುಟುಂಬಗಳ ಜೊತೆಗೆ ನಮ್ಮ ಸರ್ಕಾರ ಇರಲಿದೆ. ಎಫ್ಐಆರ್ ಆಧಾರದ ಮೇಲೆ ಸಿಐಡಿ ತನಿಖೆ ನಡೆಸಲಿದೆ. 30 ದಿನದಲ್ಲಿ ನ್ಯಾಯಾಂಗ ತನಿಖೆ ಮುಗಿಸಲು ಸೂಚಿಸಲಾಗಿದೆ. ಗುಪ್ತಚರ ಇಲಾಖೆಯ ಲೋಪವೂ ಆಗಿದೆ ಎಂದು ಒಪ್ಪಿಕೊಂಡರು.