ಬೆಂಗಳೂರು: ರಾಜ್ಯದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್ ಗಳ ಪೈಕಿ ಈಗಾಗಲೇ 3.65 ಲಕ್ಷ ಕಾರ್ಡ್ ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದ್ದು, ಇನ್ನೂ ಸಾಕಷ್ಟ ಅನರ್ಹರು ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಅವುಗಳನ್ನು ಪತ್ತೆ ಮಾಡಿ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಲಿ ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.