ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯದ ಸರ್ಕಾರದ ಪಾಲಿನ ಅನುದಾನದಲ್ಲಿ ನಯಾಪೈಸೆಯನ್ನೂ ಕೂಡ ಬಾಕಿ ಉಳಿಸಿಕೊಂಡಿಲ್ಲವೆಂದು ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯಕ್ಕೆ ಬರಬೇಕಾದ ಅನುದಾನದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿಲ್ಲ ಇದರಿಂದ ಬರ ನಿರ್ವಹಣೆಗೆ ಅನುದಾನದ ಕೊರತೆ ಎದುರಾಗಿದೆ ಎನ್ನುವ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ನಿರ್ಮಲಾ ಸೀತಾರಾಮನ್ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕೇಂದ್ರ ಸರ್ಕಾರ ತನ್ನ ಪಾಲಿನ 5,495 ಕೋಟಿ ರೂ ವಿಶೇಷ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ ಎಂಬ ಕರ್ನಾಟಕ ಸರ್ಕಾರದ ಆರೋಪ ಸಂಪೂರ್ಣ ಸುಳ್ಳು ಆರೋಪವಾಗಿದೆ. ಹಣಕಾಸು ಆಯೋಗವು ತನ್ನ ಅಂತಿಮ ವರದಿಯಲ್ಲಿ ಅಂತಹ ಯಾವುದೇ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಪಾವತಿಯಾಗಬೇಕಿದ್ದ ಅನುದಾನ ಈಗಾಗಲೇ ಪೂರ್ಣ ಪಾವತಿಯಾಗಿದೆ. ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ತನ್ನ ವೈಫಲ್ಯವನ್ನು ಮುಚ್ಚಿಡಲು ವಿನಾ ಕಾರಣ ಕೇಂದ್ರ ಸರ್ಕಾರದ ಮೇಲೆ ಅನುದಾನ ಬಿಡುಗಡೆ ಮಾಡಿಲ್ಲವೆಂಬ ಸುಳ್ಳು ಆರೋಪ ಮಾಡುತ್ತಿದ್ದು ಇದು ಕಾಂಗ್ರೆಸ್ ನ ಚುನಾವಣಾ ಗಿಮಿಕ್ ಆಗಿದೆ ಎಂದು ಆರೋಪಿಸಿದ್ದಾರೆ.
ತೀವ್ರ ಬರಗಾಲದಿಂದ ಕಂಗೆಟ್ಟಿರುವ ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ(NDRF) ಅಡಿಯಲ್ಲಿ ತಕ್ಷಣವೇ ಅನುದಾನವನ್ನು ಬಿಡುಗಡೆ ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕವು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.