ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬAಧಿಸಿದAತೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಕ್ರಮದ ವಿರುದ್ಧ ಕರ್ನಾಟಕ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಈ ಬಗ್ಗೆ ತುರ್ತು ವಿಚಾರಣೆ ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ.
ಸರ್ಕಾರದ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಆದೇಶದ ಕಾರಣ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಕೊನೆಯದಾಗಿ, ಬುಧವಾರ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ತಿಳಿಸಿತು.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತದ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ ದಯಾನಂದ್, ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು. ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ನಂತರ, ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿ ಮಂಗಳವಾರ ತೀರ್ಪು ಪ್ರಕಟಿಸಿತ್ತು. ಕರ್ನಾಟಕ ಸರ್ಕಾರದ ಅಮಾನತು ಆದೇಶವನ್ನು ರದ್ದುಪಡಿಸಿತ್ತು. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಹೀಗಾಗಿ ಇದೀಗ ಸಿಎಟಿ ಆದೇಶದ ವಿರುದ್ಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.