
ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾದ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 10.20ಕ್ಕೆ ಚಂದ್ರನಾಥ್ ರಥ್ ಅವರು ಬಾರಾಸಾತ್ನಲ್ಲಿರುವ ತಮ್ಮ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ದೋಹಾರಿಯಾ ಪ್ರದೇಶದಲ್ಲಿ ಬೈಕ್ ಗಳಲ್ಲಿ ಬಂದ ಹಂತಕರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ಕೋಲ್ಕತ್ತಾದ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ತನ್ನ ಆಪ್ತ ಸಹಾಯಕನ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸುವೇಂದು ಅಧಿಕಾರಿ ಆಸ್ಪತ್ರೆಗೆ ಧಾವಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಪ್ರತಿಕ್ರಿಯಿಸಿ, ‘ಇದು ನಿರೀಕ್ಷಿತವಾಗಿತ್ತು. ಟಿಎಂಸಿ ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತದೆ ಎಂದು ನಾವು ಭಾವಿಸಿರಲಿಲ್ಲ. ವಿರೋಧ ಪಕ್ಷದ ನಾಯಕನ ಆಪ್ತ ಸಹಾಯಕನನ್ನೇ ಕೊಲ್ಲುವ ಮೂಲಕ ಏನು ಸಂದೇಶ ಕೊಡಲು ಹೊರಟಿದ್ದಾರೆ? ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಆಕ್ರೋಶ ಹೊರಹಾಕಿದ್ದಾರೆ. ಚಂದ್ರನಾಥ್ 2018 ರಿಂದ ಸುವೇಂದು ಅವರೊಂದಿಗೆ ಗುರುತಿಸಿಕೊಂಡಿದ್ದರು ಮತ್ತು ಈ ಹಿಂದೆ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದರು.



.
.
.
.
.
.
.
.
.
.
.
.
.
.
.
.
.
.
.
.
