ಬೆಂಗಳೂರು:ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವದ 200ನೇ ವರ್ಷದ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.
ಬಳಿಕ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಕ್ಟೋಬರ್ 23, 24 ಮತ್ತು 25ರಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ “ಕಿತ್ತೂರು ವಿಜಯ ಉತ್ಸವ” ನಡೆಯಲಿದೆ.
1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ ಯದ್ಧ ನಡೆದು 200 ವರ್ಷಗಳಾಗಿವೆ. ಹೀಗಾಗಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಕಿತ್ತೂರು ವಿಜಯ ಜ್ಯೋತಿ ಯಾತ್ರೆ ಇಂದಿನಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ. ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ನೆರವು ನೀಡುತ್ತಿದ್ದೇವೆ ಎಂದರು.
ಕಿತ್ತೂರು ರಾಣಿ ಚೆನ್ನಮ್ಮನವರು ನಮಗೆಲ್ಲ ಸ್ವಾಭಿಮಾನದ ಸಂಕೇತ. ಬ್ರಿಟಿಷರು ಜಾರಿಗೆ ತಂದಿದ್ದ ತೆರಿಗೆ ನೀತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಕಿತ್ತೂರು ರಾಣಿ ಚೆನ್ನಮ್ಮ ಅವರು ವಿರೋಧ ಮಾಡಿದ್ದರು. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡಲ್ಲ ಅಂತ ನೇರವಾಗಿ ಹೇಳಿದರು. ಸಂಗೊಳ್ಳಿ ರಾಯಣ್ಣ ಸಹ ಇವರ ಸೈನ್ಯದಲ್ಲೇ ಇದ್ದರು. ಮೊದಲನೇ ಯುದ್ಧದಲ್ಲಿ ಚೆನ್ನಮ್ಮ ಅವರಿಗೆ ಜಯವಾಗುತ್ತದೆ. ಎರಡನೇ ಯುದ್ಧಕ್ಕೆ ಬ್ರಿಟಿಷರು ಹೆಚ್ಚು ಸೈನ್ಯ ತೆಗೆದುಕೊಂಡು ಬಂದಿದ್ದರಿಂದ ಕಿತ್ತೂರಿಗೆ ಸೋಲಾಗುತ್ತದೆ. ಬ್ರಿಟಿಷರು ಕಿತ್ತೂರನ್ನು ಆಕ್ರಮಿಸಿಕೊಳ್ಳುತ್ತಾರೆ. ಚೆನ್ನಮ್ಮ ಅವರನ್ನು ಸೆರೆ ಹಿಡಿಯುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಕಿತ್ತೂರು ಕ್ಷೇತ್ರದ ಶಾಸಕ ಬಾಬಾ ಸಾಹೇಬ್ ಪಾಟೀಲ್, ಶಾಸಕರಾದ ರಿಜ್ವಾನ್ ಅರ್ಷದ್, ರಾಜು ಕಾಗೆ, ಎನ್.ಎ.ಹ್ಯಾರಿಸ್, ವಿಧಾನ ಪರಿಷತ್ ನ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉನ್ನತ ಅಧಿಕಾರಿಗಳು ಸೇರಿದಂತೆ ಬೆಳಗಾವಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.