Share this news

ಬೆಂಗಳೂರು :ಅನುದಾನದ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ನಿರ್ಣಯ ಮಂಡಿಸಿದ್ದು,ಇದನ್ನು ವಿರೋಧಿಸುವ ಬದಲು ರಾಜ್ಯದ ಪರವಾದ ಹೋರಾಟಕ್ಕೆ ಬಿಜೆಪಿ ಬೆಂಬಲಿಸಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿದರು.

 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿಗಾಗಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಿರ್ಣಯ ಮಂಡಿಸಿ ಸದನದಲ್ಲಿ ಅಂಗೀಕಾರ ಮಾಡಲಾಗಿದೆ. ಇದನ್ನು ಕೇಂದ್ರಕ್ಕೆ ಕಳುಹಿಸಲು ತೀರ್ಮಾನ ಮಾಡಿದ್ದೇವೆ. ಆದರೆ ಬಿಜೆಪಿಯವರು ರಾಜ್ಯದ ಬೆಂಬಲಕ್ಕೆ ಬರದೇ ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ನಾವು ಕಾನೂನು ಚೌಕಟ್ಟಿನಲ್ಲೇ ನಿರ್ಣಯ ಮಂಡಿಸಿದ್ದೇವೆ. ಇದೇ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ, ಸಿದ್ದರಾಮಯ್ಯ ಅವರು ಮತ್ತು ಕೃಷ್ಣಬೈರೇಗೌಡ ಮಾಡಿದ ಪ್ರಸ್ತಾವನೆಗೆ ನಾವೆಲ್ಲಾ ಸೇರಿ ಒಟ್ಟಿಗೆ ಹೋರಾಟ ಮಾಡಬೇಕು ಎಂದು ಕರೆ ನೀಡಿದ್ದರು. ಅವರ ಮಾತಿನಂತೆ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ನೋವನ್ನು ಹೇಳಿದ್ದೇವೆ ಅಷ್ಟೇ ಎಂದರು.

 

ರಾಜ್ಯಸಭೆ ಚುನಾವಣೆ ಕುರಿತಂತೆ ಕುಮಾರಸ್ವಾಮಿ ಮತ್ತು ಅಮಿತ್ ಶಾ ಭೇಟಿ ವಿಚಾರ ಕೇಳಿದಾಗ ಇಬ್ಬರೂ ಏನೇನು ಚರ್ಚೆ ಮಾಡಿದ್ದಾರೆ ಎನ್ನುವ ಅರಿವು ನಮಗಿದೆ. ಯಾವ, ಯಾವ ಶಾಸಕರಿಗೆ ದೂರವಾಣಿ ಕರೆ ಮಾಡಿ ಏನೇನು ಮಾತನಾಡಿದ್ದಾರೆ ಎನ್ನುವುದು ಗೊತ್ತಿದೆ. ಶಾಸಕರ ಸಂಬಂಧಿಕರು, ಸ್ನೇಹಿತರ ಮೂಲಕ ಏನೇನು ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ನಮಗೆ ತಿಳಿದಿದೆ. ಈ ವಿಚಾರಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ,ನಮಗೂ ರಾಜಕಾರಣ ಮಾಡಲು ಗೊತ್ತಿದೆ ಎಂದರು  

 

             

Leave a Reply

Your email address will not be published. Required fields are marked *