ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಸರಕಾರಿ ಜಾಗ ಹಾಗೂ ತಮ್ಮ ಕುಮ್ಕಿ ಜಾಗದಲ್ಲಿ ಕೃಷಿ ಮಾಡಿಕೊಂಡು ಹಕ್ಕುಪತ್ರಕ್ಕಾಗಿ ನಮೂನೆ 50, 53, 57 ರಲ್ಲಿ ಅರ್ಜಿ ಸಲ್ಲಿಸಿ ಹಕ್ಕು ಪತ್ರಕ್ಕಾಗಿ ಕಾಯುತ್ತಿರುವ ಸಾವಿರಾರು ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕೃತಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರಿಗೆ ಘೋರ ಅನ್ಯಾಯ ಮಾಡಿದೆ.
ರಾಜ್ಯದಲ್ಲಿ ಸಣ್ಣ ಸಣ್ಣ ರೈತರಗಳು ಸರ್ಕಾರಿ ಜಾಗದಲ್ಲಿ ತಮ್ಮ ಜೀವನೋಪಾಯಕ್ಕಾಗಿ ಕೃಷಿ ಮಾಡಿಕೊಂಡು ಹಕ್ಕು ಪತ್ರಕ್ಕಾಗಿ ಕಾಯುತ್ತಿರಬೇಕಾದರೆ, ಸರ್ಕಾರ ಏಕಾಏಕಿ ಅರ್ಜಿಗಳನ್ನು ಬಗರ್ ಹುಕುಂ ಸಮಿತಿಯ ಮುಂದೆ ಮಂಡನೆ ಮಾಡದೆ ತಿರಸ್ಕೃತಗೊಳಿಸಲು ಸಿದ್ಧತೆ ನಡೆಸುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ಒಟ್ಟು 9873 ಅರ್ಜಿಗಳನ್ನು ತಿರಸ್ಕೃತಗೊಳಿಸಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾಹಿತಿ ಬಹಿರಂಗಪಡಿಸಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಡಜನರ ಸುಮಾರು 7909 ಬಿಪಿಎಲ್ ಪಡಿತರ ಚೀಟಿಯನ್ನು ಏಕಾಏಕಿ ರದ್ದು ಮಾಡಲು ಶಿಫಾರಸ್ಸು ಮಾಡಿರುವುದು ಅತ್ಯಂತ ಖಂಡನೀಯ, ಇದೊಂದು ಬಡವರ ವಿರೋಧಿ ಸರ್ಕಾರ, ಈ ಸರ್ಕಾರಕ್ಕೆ ಬಡವರ ಕಾಳಜಿ ಇಲ್ಲ ಎಂದು ಮತ್ತೆ ಮತ್ತೆ ಸಾಬೀತಾಗಿದೆ.
ಏಕನಿವೇಶನದ ತಾಂತ್ರಿಕ ಅನುಮೋದನೆಗೆ ಸಂಬಂಧಿಸಿ, ರಾಜ್ಯ ಸರ್ಕಾರ ಮಾಡಿದ ಅವಾಂತರದಿಂದ ಕಾರ್ಕಳದ ಜನರು ದೂರದ ಕಛೇರಿಗಳಿಗೆ ಅಲೆದಾಡುವ ಸ್ಥಿತಿ ಬಂದಿದೆ. ಈ ಹಿಂದೆ 2 ಸಾವಿರದಲ್ಲಿ ಆಗಬೇಕಿದ್ದ ಕೆಲಸಕ್ಕೆ 20 ಸಾವಿರ ವ್ಯಯಿಸುವ ಸ್ಥಿತಿ ಜನರದ್ದಾಗಿದೆ. ಈ ಎಲ್ಲಾ ವಿಚಾರಗಳು ಸೇರಿದಂತೆ ಇನ್ನೂ ಇದೇ ರೀತಿ ಅನೇಕ ಜನವಿರೋಧಿ ನೀತಿಗಳನ್ನು ಖಂಡಿಸಿ ನಾಳೆ ಕಾರ್ಕಳ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.