

ಬೆಂಗಳೂರು : ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು “ಪೊಲೀಸ್ ರಾಜ್” ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.
ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡವರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ.ಈ ಕುರಿತು ಖುದ್ದು ರಾಜ್ಯ ಸರ್ಕಾರವೇ ” ದ್ವೇಷ ಭಾಷೆ” ಯ ಪ್ರಚಾರ ನಡೆಸುತ್ತಿದ್ದು, ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದೂ ಸಂಘಟನೆಗೆ ಸೀಮಿತಗೊಳಿಸುತ್ತಿದೆ. ಸರ್ಕಾರದ ಇಂತಹ ಏಕಪಕ್ಷೀಯ ಕ್ರಮ ಒಪ್ಪಲು ಸಾಧ್ಯವಿಲ್ಲ ಎಂದು ಸುನಿಲ್ ವಾಗ್ದಾಳಿ ನಡೆಸಿದ್ದಾರೆ.
ಪ್ರಶಾಂತವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಹಾಗೂ ಹಿಂಸೆಗೆ ಪ್ರೇರಣೆ ನೀಡಿದವರು ಯಾರು ? ತಲವಾರು, ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನು ಆಡಿದವರನ್ನು ಪೊಲೀಸರು ಏಕೆ ಮುಟ್ಟುತ್ತಿಲ್ಲ ? ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಿದವರಿಗೆ, ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ರವಾನಿಸಿದವರ ಮೇಲೆ ಮಾತ್ರ ನಿಮ್ಮ ಕಾನೂನು ಕ್ರಮವೇ ? ಎಂದು ಅವರು ಪ್ರಶ್ನಿಸಿದ್ದಾರೆ.
ಪೊಲೀಸರ ಈ ಕ್ರಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಪ್ರಕ್ಷುಬ್ಧತೆ ಮೂಡಿಸುವುದಕ್ಕೆ ಕಾರಣವಾಗುತ್ತದೆ. ಎಫ್ ಐಆರ್ ಅಸ್ತ್ರ ಬಳಸಿ ಶಾಂತಿ ಸ್ಥಾಪನೆಯ ಭ್ರಮ ಬೇಡ. ಸಮಾಜದ ಎಲ್ಲಾ ವರ್ಗದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮೊದಲು ಮಾಡಬೇಕು ಸುನಿಲ್ ಕುಮಾರ್ ಸಲಹೆ ನೀಡಿದ್ದಾರೆ.








